ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬಗ್ ರಿಲೀಫ್ ಸಿಕ್ಕಿದಂತಾಗಿದೆ. ಸಿಬಿಐ ತನಿಖೆಯ ಭೀತಿಯಲ್ಲಿದ್ದ ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ರಾಜ್ಯದ ಎಸ್‌ಐಟಿ (SIT) ತನಿಖೆ ನಡೆಸುತ್ತಿವೆ. ಈ ಪ್ರಕರಣದಲ್ಲಿ ಹಣದ ಅಕ್ರಮ ವರ್ಗಾವಣೆಯ ಆಯಾಮ ಇರುವುದರಿಂದ ಕೇಂದ್ರ ತನಿಖಾ ದಳ (CBI) ಕೂಡ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಮಾಜಿ ಸಚಿವ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.
ಸಿಬಿಐ ಸಮನ್ಸ್ ನೀಡಿದ ಬೆನ್ನಲ್ಲೇ ಬಂಧನದ ಭೀತಿಯಲ್ಲಿದ್ದ ಬಿ. ನಾಗೇಂದ್ರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಇದರಿಂದಾಗಿ ಸಿಬಿಐ ವಿಚಾರಣೆಯ ಸಂದರ್ಭದಲ್ಲಿ ನಾಗೇಂದ್ರರನ್ನ ತಕ್ಷಣವೇ ಬಂಧಿಸುವಂತಿಲ್ಲ.
ಈ ಹಗರಣದ ಆರೋಪ ಕೇಳಿಬಂದ ಕೂಡಲೇ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಈ ಹಿಂದೆ ಇಡೀ ಪ್ರಕರಣದಲ್ಲಿ ಇಡಿ (ED) ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು, ನಂತರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಈಗ ಸಿಬಿಐ ತನಿಖೆ ಚುರುಕುಗೊಂಡಿರುವ ಹೊತ್ತಿನಲ್ಲಿ ಈ ಜಾಮೀನು ದೊರೆತಿರುವುದು ನಾಗೇಂದ್ರಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.
ನ್ಯಾಯಾಲಯವು ಜಾಮೀನು ನೀಡುವಾಗ ಕೆಲವು ಷರತ್ತುಗಳನ್ನು ವಿಧಿಸಿದೆ. ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ. ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ಈಗಲೂ ಸ್ವತಂತ್ರರಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನ ತಾತ್ಕಲಿಕವಾಗಿ ಮತ್ತು ತಕ್ಷಣ ಬಂಧಿಸುವಂತಿಲ್ಲ.
