ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದೀಗ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಸಮೀಪ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬುಲೆಟ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದ್ದು, ತನಿಖಾ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿ ನಗರದಲ್ಲಿ ಜನವರಿ 1ರಂದು ಬ್ಯಾನರ್ ಕಟ್ಟುವ ವಿಚಾರವಾಗಿ ಉಂಟಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿ, ಫೈರಿಂಗ್ ನಡೆದಿತ್ತು. ಈ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದು, ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮತ್ತಷ್ಟು ಗಂಭೀರವಾಗಿ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಶಾಸಕ ಜನಾರ್ಧನ ರೆಡ್ಡಿ ಅವರ ನಿವಾಸದ ಸುತ್ತಮುತ್ತ ಬಾಂಬ್ ನಿಷ್ಕ್ರಿಯ ದಳ (Bomb Disposal Squad) ಹಾಗೂ ಪೊಲೀಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ರೆಡ್ಡಿ ಅವರ ಮನೆ ಮುಂದಿನ ಕಾಂಪೌಂಡ್ ಬಳಿ 9 ಎಂಎಂ ಗುಂಡು (Bullet) ಪತ್ತೆಯಾಗಿದೆ. ಪತ್ತೆಯಾದ ಬುಲೆಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವೈಜ್ಞಾನಿಕ ಪರೀಕ್ಷೆಗಾಗಿ ಎಫ್‌ಎಸ್‌ಎಲ್ (Forensic Science Laboratory) ಗೆ ಕಳುಹಿಸಲು ನಿರ್ಧರಿಸಿದ್ದಾರೆ.
ಈ ಬುಲೆಟ್ ಇತ್ತೀಚೆಗೆ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದೆಯೇ ಅಥವಾ ಹಿಂದಿನ ಯಾವುದಾದರೂ ಘಟನೆಗೆ ಸಂಬಂಧಿಸಿದೆಯೇ ಎಂಬುದನ್ನು ಎಫ್‌ಎಸ್‌ಎಲ್ ವರದಿ ನಂತರವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಬುಲೆಟ್ ಮೇಲೆ ಇರುವ ಗುರುತುಗಳು, ಬಳಸಿದ ಶಸ್ತ್ರಾಸ್ತ್ರ ಹಾಗೂ ಗುಂಡು ಹಾರಿಸಿದ ದಿಕ್ಕಿನ ಬಗ್ಗೆ ಪರಿಶೀಲನೆ ನಡೆಯಲಿದೆ.
ಇದಕ್ಕೂ ಮುನ್ನ, ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಆಪ್ತನೆಂದು ಹೇಳಲಾಗುವ ಸತೀಶ್ ರೆಡ್ಡಿಯ ಮೂವರು ಖಾಸಗಿ ಗನ್ ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಬಲ್ಕಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂವರೂ ಪಂಜಾಬ್ ಮೂಲದವರಾಗಿದ್ದು, ಜನವರಿ 1ರಂದು ನಡೆದ ಗಲಾಟೆಯ ವೇಳೆ ಫೈರಿಂಗ್ ನಡೆಸಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು, ಗನ್ ಮ್ಯಾನ್‌ಗಳ ಪಾತ್ರ, ಅವರಿಗೆ ನೀಡಲಾಗಿದ್ದ ಶಸ್ತ್ರಾಸ್ತ್ರಗಳ ಪರವಾನಗಿ, ಫೈರಿಂಗ್‌ಗೆ ನೀಡಿದ ಆದೇಶ ಸೇರಿದಂತೆ ಹಲವು ಅಂಶಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಇನ್ನೊಂದೆಡೆ, ಈ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸೇರಿಸಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.





