ಬಳ್ಳಾರಿ: ಬಳ್ಳಾರಿಯ ಬ್ಯಾನರ್ ಗಲಭೆ ಮತ್ತು ಫೈರಿಂಗ್ ಘಟನೆಯಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತನ ಸಾವನ್ನಪ್ಪಿದ್ದು, ಈ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಗಳು, ಮೊಬೈಲ್ ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕ್ಲಿಪ್‌ಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು (FIR) ದಾಖಲಾಗಿದ್ದು, ತನಿಖೆಯಲ್ಲಿ ಐದು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ಮುಖಂಡರ ಭದ್ರತಾ ಸಿಬ್ಬಂದಿ ಹಾಗೂ ಖಾಸಗಿ ಗನ್‌ಮ್ಯಾನ್‌ಗಳನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಘಟನೆ ನಡೆದ ದಿನ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಪಕ್ಷಗಳ ನಡುವೆ ವಾಗ್ವಾದ ನಡೆಯುತ್ತಿದ್ದ ವೇಳೆ, ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುಂಡು ಹಾರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಫೈರಿಂಗ್ ಬಳಿಕ ಆ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.
ಇತ್ತ, ಜನಾರ್ಧನ ರೆಡ್ಡಿ ಅವರ ಮನೆ ಬಳಿ ನಡೆದ ಫೈರಿಂಗ್ ಘಟನೆಯನ್ನು ಖಂಡಿಸಿ ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅವರು ಈ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ಹಸ್ತಕ್ಷೇಪ ಮಾಡಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಫೈರಿಂಗ್ ಘಟನೆಯ ನಂತರ ಬಳ್ಳಾರಿಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್
ಬಳ್ಳಾರಿ, ಜ.3: ಬಳ್ಳಾರಿಯ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬ್ಯಾನರ್ ಅಳವಡಿಕೆ ವಿಚಾರವಾಗಿ ಆರಂಭವಾದ ವಾಗ್ವಾದ ಕ್ಷಣಾರ್ಧದಲ್ಲೇ ಗಲಾಟೆಯಾಗಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ನಡೆದ ಹಲ್ಲೆಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತರು ಹಲ್ಲೆ, ಕೊಲೆ ಯತ್ನ ಮತ್ತು ಗಲಾಟೆಗೆ ಕಾರಣರಾದರು ಎಂಬ ಆರೋಪಗಳನ್ನು ಮಾಡಲಾಗಿದೆ. ಈ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿದಂತೆ ಹಲವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ ಜನಾರ್ದನ ರೆಡ್ಡಿ ಅವರು ತಮ್ಮ ದೂರಿನಲ್ಲಿ ತಮಗೆ ಹಲ್ಲೆ ನಡೆಸಲಾಗಿದೆ ಹಾಗೂ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಇತ್ತ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಮತ್ತು ಗಲಾಟೆ ಆರೋಪಗಳಡಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿದ ಎಎಸ್‌ಪಿ ರವಿಕುಮಾರ್ ಅವರು ತಕ್ಷಣವೇ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ, ಸಾಕ್ಷಿಗಳ ಹೇಳಿಕೆ ಮತ್ತು ಇತರ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಗಲಾಟೆಯ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
