ಬೆಂಗಳೂರು: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶೃತಿ (30) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಘವೇಂದ್ರ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ಈ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಘವೇಂದ್ರ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಶೃತಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ದಂಪತಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ಹೀಗಾಗಿ ಘಟನೆ ನಡೆದ ಸಂದರ್ಭದಲ್ಲಿ ದಂಪತಿ ಇಬ್ಬರೇ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.
ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಗಲಾಟೆ?
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶೃತಿ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣಗಳ ರೀಲ್ಸ್‌ಗಳನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಮಾತಿನ ಚಕಮಕಿ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆ ನಡೆದ ರಾತ್ರಿ ಕೂಡ ಶೃತಿ ತಡರಾತ್ರಿಯವರೆಗೂ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದರೆಂಬ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ. ಆರಂಭದಲ್ಲಿ ಮಾತಿನ ಚಕಮಕಿಯಾಗಿದ್ದು, ಬಳಿಕ ಜಗಳವಾಗಿದೆ.
ಬಿಯರ್ ಬಾಟಲ್‌ನಿಂದ ಹಲ್ಲೆ?
ಗಲಾಟೆ ತೀವ್ರಗೊಂಡ ಸಂದರ್ಭದಲ್ಲಿ ರಾಘವೇಂದ್ರ ಪತ್ನಿಯ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮನೆಯಲ್ಲೇ ಮದ್ಯ ಸೇವಿಸಿದ್ದ ಎನ್ನಲಾಗಿದ್ದು, ಸ್ಥಳದಲ್ಲಿ ನಾಲ್ಕೈದು ಬಿಯರ್ ಬಾಟಲ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಬಿಯರ್ ಬಾಟಲ್ ಬಳಸಿ ಶೃತಿಯ ತಲೆ ಭಾಗಕ್ಕೆ ಹಲ್ಲೆ ಮಾಡಿರುವ ಸಾಧ್ಯತೆ ಇದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಶೃತಿ ಮನೆಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದೇಹದ ಇತರ ಭಾಗಗಳಿಗೂ ಹಲ್ಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಪತ್ನಿ ಹತ್ಯೆ ಬಳಿಕ ಪತಿಯೂ ಆತ್ಮಹತ್ಯೆ
ಪತ್ನಿಯ ಮೇಲೆ ಹಲ್ಲೆ ನಡೆಸಿದ ಬಳಿಕ ರಾಘವೇಂದ್ರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬಟ್ಟೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆ ಹೆಚ್‌ಎಎಲ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮನೆಯೊಳಗಿನ ಪರಿಸ್ಥಿತಿ, ಪತ್ತೆಯಾದ ವಸ್ತುಗಳು ಹಾಗೂ ಮೃತದೇಹಗಳ ಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಸಾಕ್ಷ್ಯ ಸಂಗ್ರಹಿಸುವ ಕಾರ್ಯ ನಡೆದಿದೆ.
ಸೋಕೋ ತಂಡದಿಂದ ಪರಿಶೀಲನೆ
ಘಟನೆ ಹಿನ್ನೆಲೆಯಲ್ಲಿ ಸೋಕೋ (Scene of Crime Officers) ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮನೆಯಲ್ಲಿ ಪತ್ತೆಯಾದ ಬಿಯರ್ ಬಾಟಲ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
