ಬೆಂಗಳೂರು, ಫೆಬ್ರವರಿ 10: ಕಳೆದ ಹಲವು ದಿನಗಳಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಇಂದೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳದೆ, ಒಣಹವೆಯ ವಾತಾವರಣ ಮುಂದುವರಿಯಲಿದೆ. ಈ ನಡುವೆ, ನಿನ್ನೆಯ ಹವಾಮಾನಕ್ಕೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ತಾಪಮಾನದಲ್ಲಿ ಸುಧಾರಣೆ ಕಂಡುಬಂದಿದೆ.
ಹವಾಮಾನ ತಜ್ಞರ ಪ್ರಕಾರ, ಚಳಿಗಾಲದ ಕೊನೆಯ ಹಂತದಲ್ಲಿರುವುದರಿಂದ ಬೆಳಿಗ್ಗೆ ಮತ್ತು ರಾತ್ರಿ ವೇಳೆ ಚಳಿ ಹೆಚ್ಚು ಅನುಭವವಾಗುತ್ತಿದ್ದರೂ, ಹಗಲು ವೇಳೆಯಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ ದಿನದ ತಾಪಮಾನ ಏರಿಕೆಯಾಗುತ್ತಿದ್ದು, ಒಣಹವೆಯ ಪರಿಣಾಮವಾಗಿ ಚರ್ಮದ ಸಮಸ್ಯೆ, ಉಸಿರಾಟದ ತೊಂದರೆ, ಜ್ವರ ಹಾಗೂ ಗಂಟಲು ನೋವು ಮೊದಲಾದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಒಣಹವೆ
ರಾಜ್ಯದ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದಲೇ ಒಣಹವೆಯ ವಾತಾವರಣ ಮುಂದುವರಿದಿದ್ದು, ಇಂದೂ ಇದೇ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ತೀವ್ರ ಚಳಿ ಅನುಭವವಾಗುತ್ತಿದ್ದು, ಹಗಲು ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.
ಇನ್ನು ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ. ಇಲ್ಲಿ ಸಹ ಒಣಹವೆಯ ವಾತಾವರಣ ಮುಂದುವರಿಯಲಿದ್ದು, ಸಮುದ್ರ ತೀರ ಪ್ರದೇಶಗಳಲ್ಲಿ ತೇವಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಹಿರಿಯ ನಾಗರಿಕರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ದಕ್ಷಿಣ ಒಳನಾಡಿನಲ್ಲೂ ಶುಷ್ಕ ವಾತಾವರಣ
ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಇಂದೂ ಒಣಹವೆಯ ವಾತಾವರಣ ಮುಂದುವರಿಯಲಿದೆ. ಮಳೆ ಇಲ್ಲದ ಕಾರಣ ರೈತರು ಹಾಗೂ ಸಾರ್ವಜನಿಕರು ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಎಚ್ಚರಿಕೆಯಿಂದಿರಬೇಕೆಂದು ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಚಳಿ ಕಡಿಮೆ, ಆದರೂ ಎಚ್ಚರಿಕೆ ಅಗತ್ಯ
ರಾಜಧಾನಿ ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಗಿಂತ ಇಂದು ಚಳಿ ಸ್ವಲ್ಪ ಕಡಿಮೆಯಾದರೂ, ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ.
ಈ ರೀತಿಯ ಹವಾಮಾನ ಬದಲಾವಣೆಯಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚನೆಯ ಉಡುಪು ಧರಿಸುವುದು, ಬಿಸಿ ಆಹಾರ ಸೇವಿಸುವುದು ಮತ್ತು ಸಮತೋಲಿತ ಆಹಾರ ಕ್ರಮ ಪಾಲಿಸುವುದು ಅತ್ಯಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ, ಸಾಕಷ್ಟು ನೀರು ಕುಡಿಯುವುದು ಮತ್ತು ಹೊರಗಡೆ ತಣ್ಣಗಿನ ಗಾಳಿ ನೇರವಾಗಿ ತಾಗದಂತೆ ಎಚ್ಚರಿಕೆ ವಹಿಸುವುದು ಉತ್ತಮ ಎಂದು ತಿಳಿಸಿದ್ದಾರೆ.
