ಬೀದರ್: ಶ್ರೀರಾಮ ಮತ್ತು ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ವೈರಲ್ ಆಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.. ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಮುನ್ನವೇ ಈ ಪ್ರಚೋದನಕಾರಿ ಬೆಳವಣಿಗೆ ನಡೆದಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಶ್ರೀರಾಮ ಮತ್ತು ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಘಟನೆ ನಡೆದಿದೆ. ಬಸವಕಲ್ಯಾಣದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ ಆಯೋಜನೆಗೊಂಡಿದ್ದು, ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕನ್ನೇರಿ ಶ್ರೀಗಳ ಆಗಮನದ ಅನುಮತಿ ಸಿಕ್ಕ ಬೆನ್ನಲ್ಲೇ ಈ ವಿವಾದ ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ.
‘ಬಸವಪರ ಸಂಘಟನೆಗಳ ಒಕ್ಕೂಟ’ ಎಂಬ ಫೇಸ್ಬುಕ್ ಖಾತೆಯಿಂದ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರನ್ನು ‘ತಾಲಿಬಾನಿಗಳು’ ಎಂದು ನಿಂದಿಸಿ ಕೀಳುಮಟ್ಟದ ಪೋಸ್ಟ್‌ಗಳನ್ನು ಹಾಕಲಾಗಿದ್ದು, ಈ ಸಂಬಂಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಈ ಪ್ರಚೋದನಕಾರಿ ಪೋಸ್ಟ್‌ಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ದೇವರು ಹಾಗೂ ಧಾರ್ಮಿಕ ಮುಖಂಡರಿಗೆ ಅವಮಾನಿಸಿರುವ ಫೇಸ್ಬುಕ್ ಖಾತೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಮುಖಂಡ ಕೃಷ್ಣ ಗೋಣೆ ಅವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ.
ಜಗದ್ಗುರು ಬಸವಣ್ಣನವರ ಪವಿತ್ರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ದೇವರುಗಳಿಗೆ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಮಾವೇಶದ ಹೊತ್ತಿನಲ್ಲೇ ಇಂತಹ ಪ್ರಚೋದನಕಾರಿ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಈಗಾಗಲೇ ದೂರು ಸ್ವೀಕರಿಸಿರುವ ಬಸವಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಚೋದನಕಾರಿ ಪೋಸ್ಟ್‌ಗಳ ಮೂಲ ಪತ್ತೆಗೆ ಸೈಬರ್ ಕ್ರೈಮ್ ತಂಡವನ್ನೂ ಬಳಸಿಕೊಳ್ಳಲಾಗುತ್ತಿದೆ.





