ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪರಿಚಿತ ವ್ಯಕ್ತಿಗಳು ಪಾಲಿಕೆ ಕಚೇರಿಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದ್ದಾರೆ.
ಮಹಾನಗರ ಪಾಲಿಕೆಯ ಉಪ ಆಯುಕ್ತ ಉದಯಕುಮಾರ್ ತಳವಾರ್ ಅವರಿಗೆ ಇ-ಮೇಲ್ ಮೂಲಕ ಈ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ. ಪಾಲಿಕೆ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಬಂದ ಹಿನ್ನೆಲೆ ಅಧಿಕಾರಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ತಂಡಗಳು ಪಾಲಿಕೆ ಕಚೇರಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡಿವೆ.
ಪಾಲಿಕೆಯ ಕೊಠಡಿಗಳಲ್ಲಿ ತೀವ್ರ ತಪಾಸಣೆ
ಬಾಂಬ್ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಮಹಾನಗರ ಪಾಲಿಕೆಯ ಕಚೇರಿಯ ವಿವಿಧ ವಿಭಾಗಗಳು, ಕೊಠಡಿಗಳು ಹಾಗೂ ಆವರಣದ ಪ್ರತಿಯೊಂದು ಭಾಗದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ವಸ್ತುಗಳಿಗಾಗಿ ಶ್ವಾನ ದಳದ ನೆರವಿನಿಂದ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಕಚೇರಿಯ ಒಳಭಾಗ, ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳು ಹಾಗೂ ಇತರ ಪ್ರಮುಖ ವಿಭಾಗಗಳಲ್ಲಿಯೂ ತಪಾಸಣೆ ನಡೆಸಲಾಗುತ್ತಿದೆ.
ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ಕಚೇರಿ ಕೆಲಸಗಳಿಗಾಗಿ ಆಗಮಿಸಿದ್ದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ವ್ಯವಸ್ಥೆಯನ್ನೂ ಪರಿಶೀಲಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳದ ತಪಾಸಣೆ ಪೂರ್ಣಗೊಂಡ ಬಳಿಕವಷ್ಟೇ ಕಚೇರಿಯಲ್ಲಿ ಸ್ಫೋಟಕ ವಸ್ತುಗಳಿವೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.
ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಇನ್ಸ್ಪೆಕ್ಟರ್ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾಲಿಮಿರ್ಚಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶ ಬಂದಿರುವ ಇ-ಮೇಲ್ನ ವಿವರಗಳನ್ನು ಪೊಲೀಸರು ಪರಿಶೀಲಿಸುವ ಸಾಧ್ಯತೆಯಿದೆ. ಸಂದೇಶವನ್ನು ಕಳುಹಿಸಿದವರು ಯಾರು? ಯಾವ ಉದ್ದೇಶದಿಂದ ಈ ಬೆದರಿಕೆ ನೀಡಲಾಗಿದೆ? ಇದರ ಹಿಂದೆ ಕಿಡಿಗೇಡಿಗಳ ಕೈವಾಡವಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯಬೇಕಿದೆ.
ಈ ಹಿನ್ನೆಲೆ ಅಧಿಕಾರಿಗಳು ಹಾಗೂ ಪೊಲೀಸರು ಯಾವುದೇ ನಿರ್ಲಕ್ಷ್ಯ ತೋರದೆ ತಪಾಸಣೆ ಮುಂದುವರಿಸಿದ್ದಾರೆ. ಸದ್ಯ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.





