ಬೆಳಗಾವಿ: ಹತ್ತು ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಅತ್ತೆ ಹಾಗೂ ಅಳಿಯನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಜೀವಾಪುರ ಗ್ರಾಮದ ಬಸವ್ವ ನಾಯ್ಕರ್ (60) ಹಾಗೂ ಅವರ ತಮ್ಮನ ಮಗ ರಮೇಶ್ ನಾಯ್ಕರ್ (26) ಎಂದು ಗುರುತಿಸಲಾಗಿದೆ. ಬಸವ್ವ ಅವರ ಸಹೋದರಿಯರ ಮಕ್ಕಳೇ ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರವಿ ಮತ್ತು ಪುಂಡಲೀಕ ಎಂಬುವವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹತ್ತು ಎಕರೆ ಆಸ್ತಿ ವಿಚಾರಕ್ಕೆ ನಡೆದ ಜಗಳ
ಬಸವ್ವ ನಾಯ್ಕರ್ ಅವರ ಕುಟುಂಬದಲ್ಲಿ ಹಲವು ವರ್ಷಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಸುಮಾರು ಹತ್ತು ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಅಣ್ಣ-ತಮ್ಮಂದಿರು ಹಾಗೂ ಅಕ್ಕ-ತಂಗಿಯರ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಕುಟುಂಬದ ಸದಸ್ಯರ ನಡುವಿನ ಈ ವಿವಾದ ಹಲವು ವರ್ಷಗಳಿಂದ ಬಗೆಹರಿಯದೆ ಮುಂದುವರಿದಿತ್ತು.
ಈ ಆಸ್ತಿ ವಿವಾದವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಸವ್ವ ಅವರ ಸಹೋದರಿಯರ ಮಕ್ಕಳಾದ ರವಿ ಮತ್ತು ಪುಂಡಲೀಕ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪವಿದೆ. ಇಬ್ಬರೂ ಸೇರಿಕೊಂಡು ಕೊಡಲಿಯಿಂದ ಹಲ್ಲೆ ನಡೆಸಿ ಬಸವ್ವ ಹಾಗೂ ರಮೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ರಾತ್ರಿ 9ರಿಂದ 9.30ರ ಅವಧಿಯಲ್ಲಿ ಕೊಲೆ
ಘಟನೆ ಹಿಂದಿನ ದಿನ ರಾತ್ರಿ 9ರಿಂದ 9.30ರ ಅವಧಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆ ನಡೆದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಸೋಕೋ (SOKO) ತಂಡವೂ ಸ್ಥಳಕ್ಕೆ ತೆರಳಿ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಸಿದೆ.
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಲೆಗೆ ಬಳಸಲಾಗಿದೆ ಎನ್ನಲಾದ ಆಯುಧ ಸೇರಿದಂತೆ ಘಟನೆಯ ಕುರಿತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.
ಆರೋಪಿಗಳಿಗಾಗಿ ಪೊಲೀಸರ ಶೋಧ
ಘಟನೆ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾಹಿತಿ ನೀಡಿದ್ದಾರೆ. ಕುಟುಂಬದಲ್ಲಿ ಹಲವು ವರ್ಷಗಳಿಂದ ಆಸ್ತಿ ವಿವಾದವಿತ್ತು. ಹತ್ತು ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಆಗಾಗ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಿದ್ದವು. ಇದೀಗ ಅದೇ ವಿವಾದದ ಹಿನ್ನೆಲೆ ಕೊಲೆ ನಡೆದಿರುವ ಶಂಕೆಯಿದೆ ಎಂದು ತಿಳಿಸಿದ್ದಾರೆ.
ರವಿ ಮತ್ತು ಪುಂಡಲೀಕ ಎಂಬುವವರು ಕೊಲೆ ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
