ಹಾಸನ: ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು ಓರ್ವನಿಗೆ ಚಾಕು ಇರಿದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ಬೇಲೂರು ಪಟ್ಟಣದ ಹೋಟೆಲ್ ಕಾರ್ಮಿಕನಾಗಿರುವ ಶರತ್ (21) ಎಂಬ ಯುವಕ ಗಾಯಗೊಂಡಿದ್ದಾನೆ. ಆತನ ಮೇಲೆ ಪ್ರಜ್ವಲ್ (22) ಎಂಬ ಯುವಕ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಪ್ರಜ್ವಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಹಿತಿಯ ಪ್ರಕಾರ, ಶರತ್ ಮತ್ತು ಪ್ರಜ್ವಲ್ ಇಬ್ಬರೂ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಕಳೆದ ಎರಡು ದಿನಗಳಿಂದ ಇಬ್ಬರ ನಡುವೆ ಮನಸ್ತಾಪ ಹಾಗೂ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಶರತ್, ಪ್ರಜ್ವಲ್‌ನನ್ನು ಮಾತನಾಡಿಸಲು ಬಂದಿದ್ದ ಎನ್ನಲಾಗಿದೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ನಂತರ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇಬ್ಬರ ನಡುವೆ ಗಲಾಟೆ ನಡೆದಿದೆ.
ಈ ಸಂದರ್ಭದಲ್ಲಿ ಪ್ರಜ್ವಲ್ ತನ್ನ ಬಳಿ ಇದ್ದ ಚಾಕುವಿನಿಂದ ಶರತ್ ಮೇಲೆ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಿಂದ ಗಾಯಗೊಂಡ ಶರತ್ ಸ್ಥಳದಲ್ಲೇ ಕುಸಿದುಬಿದ್ದಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಳಿಕ ಆತನನ್ನು ಚಿಕಿತ್ಸೆಗಾಗಿ ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಳಿಕ ಆರೋಪಿ ಪ್ರಜ್ವಲ್ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
