ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಆಗಸ್ಟ್ ಅಂತ್ಯದೊಳಗೆ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಹಾಗೂ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಕುರಿತು ನಡೆದ ವರ್ಚುವಲ್ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದರು.
ನಗರದ ಸುಮಾರು 1,500 ಕಿ.ಮೀ. ಉದ್ದದ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಪೈಕಿ ಈಗಾಗಲೇ 964 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಳಿದಿರುವ ಒತ್ತುವರಿಗಳನ್ನು ಕೂಡ ನಿಗದಿತ ಅವಧಿಯೊಳಗೆ ತೆರವುಗೊಳಿಸುವಂತೆ ಸಚಿವರು ಸೂಚಿಸಿದರು.
ಒತ್ತುವರಿ ತೆರವು ಕಾರ್ಯಾಚರಣೆ ಕೇವಲ ತೆರವುಗೊಳಿಸುವುದಕ್ಕೆ ಸೀಮಿತವಾಗಬಾರದು. ತೆರವುಗೊಳಿಸಿದ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳ ದುರಸ್ತಿ ಹಾಗೂ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಸಮಾನಾಂತರವಾಗಿ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದರಿಂದ ಸಾರ್ವಜನಿಕರು ಪಾದಚಾರಿ ಮಾರ್ಗಗಳನ್ನು ಸುರಕ್ಷಿತವಾಗಿ ಬಳಸಲು ಅನುಕೂಲವಾಗಲಿದೆ.
ಪುನಃ ಒತ್ತುವರಿ ಮಾಡಿದರೆ ಕಠಿಣ ಕ್ರಮ
ಒತ್ತುವರಿ ತೆರವುಗೊಳಿಸಿದ ಬಳಿಕವೂ ಕೆಲವು ಸ್ಥಳಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತೆ ಬಂದು ವ್ಯಾಪಾರ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಪುನರಾವರ್ತಿತ ಒತ್ತುವರಿಯನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪುನಃ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವವರ ಸಾಮಗ್ರಿಗಳನ್ನು ಜಪ್ತಿ ಮಾಡುವುದರ ಜೊತೆಗೆ, ಅವರಿಗೆ ದುಪ್ಪಟ್ಟು ದಂಡ ವಿಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತೆರವುಗೊಳಿಸಿದ ಪ್ರದೇಶಗಳಲ್ಲಿ ಮತ್ತೆ ಒತ್ತುವರಿ ಆಗದಂತೆ ನಿರಂತರ ಮೇಲ್ವಿಚಾರಣೆ ನಡೆಸುವಂತೆಯೂ ಸೂಚಿಸಿದರು.
ಈ ಕಾರ್ಯಾಚರಣೆಗೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಈ ಕುರಿತು ಶೀಘ್ರದಲ್ಲೇ ಎರಡೂ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ನಗರದ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತವಾಗಿಡುವುದು ಹಾಗೂ ತೆರವುಗೊಳಿಸಿದ ಪ್ರದೇಶಗಳಲ್ಲಿ ಮತ್ತೆ ಒತ್ತುವರಿ ಆಗದಂತೆ ತಡೆಯುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.





