ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಪ್ರತಿದಿನ ಶಾಲೆಗೆ ಹಾಜರಾಗುತ್ತಿದ್ದ ಬಾಲಕಿಯ ದೈಹಿಕ ಬದಲಾವಣೆಗಳನ್ನು ಗುರುತಿಸುವಲ್ಲಿ ವಿಫಲರಾದ ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವಿರುದ್ಧ ಈಗ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.
ಬೆಂಗಳೂರಿನ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಗೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡಾಗ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದ್ದು, ಕೂಡಲೇ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಈ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದು, ಬಾಲಕಿಯ ಮನೆ ಸಮೀಪ ವಾಸವಿದ್ದ 19 ವರ್ಷದ ಖಾಸಗಿ ಕಂಪನಿ ಉದ್ಯೋಗಿಯನ್ನು ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಿದ್ದಾರೆ.
ಶಿಕ್ಷಕರ ನಿರ್ಲಕ್ಷ್ಯದ ಬಗ್ಗೆ ತನಿಖೆ
ಈ ಘಟನೆ ತಿಳಿಯುತ್ತಿದ್ದಂತೆಯೇ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿ 9 ತಿಂಗಳ ಗರ್ಭಿಣಿಯಾಗಿದ್ದರೂ, ದಿನನಿತ್ಯ ಶಾಲೆಗೆ ಬರುತ್ತಿದ್ದಳು. ಆದರೆ ಅವಳಲ್ಲಾದ ದೈಹಿಕ ಬದಲಾವಣೆಗಳನ್ನು ಶಿಕ್ಷಕರು ಗಮನಿಸದಿರುವುದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದೆ.
ಘಟನೆ ಶಾಲೆಯ ಆವರಣದಲ್ಲಿ ನಡೆದಿಲ್ಲದಿರಬಹುದು ಮತ್ತು ಆರೋಪಿಯು ಶಾಲೆಯವರಲ್ಲದಿರಬಹುದು. ಆದರೆ, ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನಡವಳಿಕೆಯಲ್ಲಿನ ಬದಲಾವಣೆಗಳನ್ನು ಗಮನಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿನಿ ಒಂಬತ್ತು ತಿಂಗಳ ಗರ್ಭಿಣಿಯಾಗುವವರೆಗೂ ಶಿಕ್ಷಕರಿಗೆ ಯಾವುದೇ ಸುಳಿವು ಸಿಗದಿರುವುದು ಅವರ ಕರ್ತವ್ಯ ಲೋಪವನ್ನು ಎತ್ತಿ ತೋರಿಸುತ್ತದೆ ಎಂದು ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.
ಶಿಸ್ತು ಕ್ರಮ ಮತ್ತು ಮುನ್ನೆಚ್ಚರಿಕೆ:
ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಸರಿಯಾದ ವಿವರಣೆ ನೀಡದಿದ್ದಲ್ಲಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರ ಬೆನ್ನಲ್ಲೇ, ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರ ಆರೋಗ್ಯ, ವರ್ತನೆ ಮತ್ತು ದೈಹಿಕ ಬದಲಾವಣೆಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯರೊಂದಿಗೆ ನಿರಂತರ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲು ಶಿಕ್ಷಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
