ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಸತತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇದರಿಂದಾಗಿ ಹಲವು ರಸ್ತೆಗಳು ಜಲಾವೃತಗೊಂಡಿವೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸಂಜೆಯಿಂದಲೇ ಆರಂಭವಾದ ಈ ಮಳೆಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ತೀವ್ರವಾಗಿದೆ. ಇದರ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ (IMD) ಮಹತ್ವದ ಎಚ್ಚರಿಕೆ ನೀಡಿದ್ದು, ಮುಂದಿನ ಮೂರು ಗಂಟೆಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ 30-40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಎಚ್ಚರಿಕೆ ನೀಡಲಾಗಿದೆ.
ಜಲಾವೃತಗೊಂಡ ರಸ್ತೆಗಳು
ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ಬೆಂಗಳೂರಿನ ಮೆಜೆಸ್ಟಿಕ್, ಲಾಲ್‌ಬಾಗ್, ಕಾರ್ಪೋರೇಷನ್, ಮಾರ್ಕೆಟ್, ರಾಜಾಜಿನಗರ, ಮಲ್ಲೇಶ್ವರಂ, ಹೆಬ್ಬಾಳ, ಶಿವಾನಂದ ಸರ್ಕಲ್, ರೇಸ್‌ಕೋರ್ಸ್ ರೋಡ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಈ ಪ್ರದೇಶಗಳಲ್ಲಿ ರಸ್ತೆಗಳು ನೀರಿನಿಂದ ತುಂಬಿಹೋಗಿವೆ, ಜನರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಮುನ್ಸೂಚನೆ
ಈ ವಾರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ನಾಲ್ಕು ದಿನಗಳ ಕಾಲ ಈ ಎಚ್ಚರಿಕೆ ಮುಂದುವರಿಯಲಿದೆ.
ಕೊಡಗಿನಲ್ಲಿ ಗುಡ್ಡ ಕುಸಿತ
ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಮಳೆ ಇದೀಗ ಮತ್ತೆ ಚುರುಕಾಗಿದೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತವಾಗಿದೆ. ಜೋಡುಪಾಲ ಬಳಿ ಈ ಘಟನೆ ಸಂಭವಿಸಿದ್ದು, ಸದ್ಯ ವಾಹನ ಸಂಚಾರಕ್ಕೆ ತೊಂದರೆಯಾಗಿಲ್ಲ. ಆದರೆ, ಮಳೆ ಇದೇ ರೀತಿ ಮುಂದುವರಿದರೆ ಗುಡ್ಡದ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.





