ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

Untitled design 2026 07 26T185346.826

ಬೆಂಗಳೂರು, ಜು. 26: ದೇಶಾದ್ಯಂತ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ನಡುವೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಬರಹಗಳಿರುವ ಪೋಸ್ಟರ್ ಪ್ರದರ್ಶಿಸಿದ ಆರೋಪದ ಮೇಲೆ ಯುವತಿಯೊಬ್ಬಳ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನೀಟ್ ಪರೀಕ್ಷೆಯ ಪಾರದರ್ಶಕತೆ, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವತಿಯೊಬ್ಬಳು ಪ್ರದರ್ಶಿಸಿದ ಪೋಸ್ಟರ್‌ಗಳು ಅಲ್ಲಿದ್ದವರ ಗಮನ ಸೆಳೆದಿವೆ.

ಪೊಲೀಸರ ಮಾಹಿತಿ ಪ್ರಕಾರ, ಯುವತಿ 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪರ ಘೋಷಣೆಗಳಿರುವ ಪೋಸ್ಟರ್ ಹಿಡಿದಿದ್ದಳು ಎನ್ನಲಾಗಿದೆ. ಇದಲ್ಲದೆ, ಪೋಸ್ಟರ್‌ನಲ್ಲಿ “Ukhad Le BLR Police” ಎಂಬ ಬರಹವೂ ಇದ್ದು, ಇದು ಬೆಂಗಳೂರು ಪೊಲೀಸರ ವಿರುದ್ಧ ಪ್ರಚೋದನಕಾರಿ ಸಂದೇಶ ಹೊಂದಿದೆ ಎಂದು ಆರೋಪಿಸಲಾಗಿದೆ.

ಪ್ರತಿಭಟನಾ ಸ್ಥಳದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ಪೋಸ್ಟರ್‌ಗಳನ್ನು ಗಮನಿಸಿದ ತಕ್ಷಣ ಪರಿಸ್ಥಿತಿ ಉದ್ವಿಗ್ನವಾಗದಂತೆ ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ವೇಳೆ ಅಲ್ಲಿದ್ದ ಕೆಲವು ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳು ಕೂಡ ಆ ಪೋಸ್ಟರ್‌ಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆಯ ಉದ್ದೇಶಕ್ಕೆ ಧಕ್ಕೆ ಉಂಟುಮಾಡುವ ಕ್ರಮ ಎಂದು ಹೇಳಿ ಯುವತಿಯನ್ನು ಪ್ರಶ್ನಿಸಿದ್ದಾರೆ. ಬಳಿಕ ಆಕೆ ಪ್ರತಿಭಟನಾ ಸ್ಥಳದಿಂದ ಹೊರನಡೆದಿದ್ದಾಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಯುವತಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದಲ್ಲಿ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶ ಹೊಂದಿರುವ ಆರೋಪ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದು, ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳು, ವಿಡಿಯೊಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ.

Exit mobile version