ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಯೋಜನೆ ಕುರಿತು ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘಟನೆಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು ಮತ್ತು ಆಕ್ಷೇಪಣೆಗಳನ್ನು ಸಮಗ್ರವಾಗಿ ಪರಿಶೀಲಿಸಲು ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿ 30 ದಿನಗಳ ಒಳಗಾಗಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ.
ಬಿಡದಿ ಟೌನ್‌ಶಿಪ್ ಯೋಜನೆಗೆ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿವೆ. ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 9 ಮತ್ತು 10ರಂದು ಬಿಜೆಪಿ-ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸಲು ನಿರ್ಧರಿಸಿವೆ. ವಿಪಕ್ಷಗಳ ಪ್ರತಿಭಟನೆ ಹಾಗೂ ರೈತರ ವಿರೋಧದ ನಡುವೆಯೇ ಸರ್ಕಾರ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜನೆ ಕುರಿತು ಸ್ಪಷ್ಟನೆ ನೀಡಿದ್ದು, ಯಾವುದೇ ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಯೋಜನೆಯನ್ನು ಕಾನೂನಾತ್ಮಕ, ಮಾನವೀಯ ಹಾಗೂ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ನೀಡುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?
ನ್ಯಾಯಮೂರ್ತಿ ಗುಹನಾಥನ್ ನರೇಂದರ್ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯು ಯೋಜನೆಯ ವಿವಿಧ ಆಯಾಮಗಳನ್ನು ಪರಿಶೀಲಿಸಿ 30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ಬಿಡದಿ ಸಮಗ್ರ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಜನರ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸರ್ಕಾರ ಮನ್ನಣೆ ನೀಡಲಿದೆ ಎಂದು ಹೇಳಿದ್ದಾರೆ. ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
2006ರಿಂದಲೂ ಯೋಜನೆ
ಬಿಡದಿ ಬಳಿ ಸಮಗ್ರ ಉಪನಗರವನ್ನು ಅಭಿವೃದ್ಧಿಪಡಿಸುವ ಕುರಿತು 2006ರಲ್ಲೇ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ವಿವಿಧ ಕಾರಣಗಳಿಂದ ಯೋಜನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಬೆಂಗಳೂರಿನ ಸುತ್ತಮುತ್ತ ಬಂಡವಾಳ ಹೂಡಿಕೆ ಹಾಗೂ ನಗರಾಭಿವೃದ್ಧಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಲು ಸರ್ಕಾರ ಮುಂದಾಗಿದೆ.
ಜನವಸತಿ ಪ್ರದೇಶಗಳ ಸ್ಥಳಾಂತರವನ್ನು ಕನಿಷ್ಠಗೊಳಿಸುವುದು ಹಾಗೂ ಭೂಮಾಲೀಕರಿಗೆ ಉತ್ತಮ ಮೌಲ್ಯ ಒದಗಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಇದೀಗ ಸಮಿತಿ ನೀಡಲಿರುವ ವರದಿ ಯೋಜನೆಯ ಮುಂದಿನ ರೂಪುರೇಷೆಗಳಿಗೆ ನಿರ್ಣಾಯಕವಾಗುವ ಸಾಧ್ಯತೆಯಿದೆ.
