ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಇಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದಿಂದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನವರೆಗೆ ಸಾಗಲಿದೆ. ಒಟ್ಟು 26 ಕಿಲೋಮೀಟರ್‌ಗಳಷ್ಟು ದೂರವನ್ನು ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕ್ರಮಿಸಲಿದ್ದಾರೆ.
ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಇಂದು ಬೆಳಗ್ಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಯಾತ್ರೆಯನ್ನು ಆರಂಭಿಸಿರುವುದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಹಲವು ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸುನಿಲ್ ಕುಮಾರ್, ಮಹೇಶ್ ತೆಂಗಿನಕಾಯಿ ಸೇರಿದಂತೆ ಹಲವು ಮುಖಂಡರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಸ್ತುವಾರಿಯಲ್ಲಿ ಇಂದಿನ ಪಾದಯಾತ್ರೆ ನಡೆಯುತ್ತಿದ್ದು, ವಿವಿಧ ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಶೇಷವಾಗಿ ಪಿಂಚಣಿ ಹಾಗೂ ವೃದ್ಧಾಪ್ಯ ವೇತನ ಪಾವತಿಯಲ್ಲಿ ಆಗುತ್ತಿರುವ ವಿಳಂಬ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸಮಸ್ಯೆಗಳನ್ನು ಜನರ ಮುಂದಿಟ್ಟು ಸರ್ಕಾರದ ಗಮನ ಸೆಳೆಯುವುದು ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
ಇಂದಿನ ಪಾದಯಾತ್ರೆಯಲ್ಲಿ ಸಿಂಧನೂರು, ವಿಜಯನಗರ, ಗದಗ, ಕನಕಗಿರಿ, ಹಾವೇರಿ, ಹುಬ್ಬಳ್ಳಿ ಹಾಗೂ ಧಾರವಾಡ ಭಾಗಗಳಿಂದ ಆಗಮಿಸಿರುವ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಾರ್ಗಮಧ್ಯೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಂಚಿನಾಳ ಕ್ಯಾಂಪ್ ಬಳಿ ಭೋಜನ ವಿರಾಮವನ್ನು ಆಯೋಜಿಸಲಾಗಿದೆ. ಬಳಿಕ ಪಾದಯಾತ್ರೆ ಮುಂದುವರಿದು ಕಾರಟಗಿ ಕಡೆಗೆ ಸಾಗಲಿದೆ.
ಇದೇ ವೇಳೆ, ಕಾರಟಗಿಯಲ್ಲಿ ಇಂದು ಬೃಹತ್ ಬಹಿರಂಗ ಸಭೆ ಆಯೋಜಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳು, ಪಾದಯಾತ್ರೆಯ ಉದ್ದೇಶ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ವಿಜಯೇಂದ್ರ ಮಾತನಾಡುವ ಸಾಧ್ಯತೆಯಿದೆ.
‘ಬಳ್ಳಾರಿ ಚಲೋ’ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುವುದಾಗಿ ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆಯನ್ನೂ ಪಕ್ಷದ ನಾಯಕರು ನೀಡಿದ್ದಾರೆ.





