ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಮತ್ತು ವಿವಿಧ ಹಗರಣಗಳ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಆರಂಭಿಸಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಭರ್ಜರಿ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯಲ್ಲಿ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಬಿಸಿಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿದ್ದಾರೆ. ಯಾತ್ರೆಯ ವೇಳೆ ದಲಿತ ಮುಖಂಡರು, ರೈತರು ಸೇರಿದಂತೆ ವಿವಿಧ ಸಮುದಾಯಗಳ ಜನರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಆರಂಭವಾಗಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇದೀಗ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ದಿನ ಸುಮಾರು 12 ಕಿಲೋಮೀಟರ್ ದೂರ ಕ್ರಮಿಸಿದ್ದ ಬಿಜೆಪಿ ನಾಯಕರು, ಎರಡನೇ ದಿನ ಮಸ್ಕಿಯಿಂದ ಯಾತ್ರೆ ಮುಂದುವರಿಸಿ ಸುಮಾರು 21 ಕಿಲೋಮೀಟರ್ ಸಾಗಿದರು. ಎರಡನೇ ದಿನದ ಪಾದಯಾತ್ರೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ಅಂತ್ಯಗೊಂಡಿತು.
ಯಾತ್ರೆ ಮುಕ್ತಾಯಗೊಂಡ ಬಳಿಕ ಬಿ.ವೈ. ವಿಜಯೇಂದ್ರ ಅವರು ಗುಡದೂರಿನ ಕೇರಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮದಲ್ಲೇ ವಾಸ್ತವ್ಯ ಹೂಡಿದ ಅವರು, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ವತಃ ಊಟ ಬಡಿಸುವ ಮೂಲಕ ಗಮನ ಸೆಳೆದರು.
ಸರ್ಕಾರ ವಿಸರ್ಜಿಸಿ ಚುನಾವಣೆ ಎದುರಿಸಿ: ವಿಜಯೇಂದ್ರ ಸವಾಲು
ಮಸ್ಕಿ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಉದ್ದೇಶದಿಂದ ಬಿಜೆಪಿ ಈ ಪಾದಯಾತ್ರೆ ನಡೆಸುತ್ತಿದೆ ಎಂದು ಹೇಳಿದರು. CM ಡಿ.ಕೆ. ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿದ ಅವರು, ಧೈರ್ಯವಿದ್ದರೆ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬರಲಿ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಲಿತ ಮುಖಂಡರೊಂದಿಗೆ ಸಂವಾದ
ಮಸ್ಕಿಯ ಮುದಬಾಳ ಕ್ರಾಸ್ ಬಳಿ ವಿಜಯೇಂದ್ರ ಅವರು ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರ ದಲಿತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಹತ್ಯೆಯಾದ ದಲಿತ ವ್ಯಕ್ತಿಯ ವಿರುದ್ಧವೇ ಪೋಕ್ಸೋ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತ ‘ಬಳ್ಳಾರಿ ಚಲೋ’ಗೆ ಕಾಂಗ್ರೆಸ್ ಕೂಡ ರಾಜಕೀಯವಾಗಿ ತಿರುಗೇಟು ನೀಡಿದೆ. ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಮುಖ್ಯಮಂತ್ರಿ ‘ಪಶ್ಚಾತ್ತಾಪದ ಯಾತ್ರೆ’ ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ‘ನಿಮ್ಮದೂ ಪಶ್ಚಾತ್ತಾಪವೇ’ ಎಂದು ತಿರುಗೇಟು ನೀಡಿದ್ದಾರೆ.
ಇನ್ನೂ ಏಳು ದಿನಗಳ ಕಾಲ ‘ಬಳ್ಳಾರಿ ಚಲೋ’ ಪಾದಯಾತ್ರೆ ಮುಂದುವರಿಯಲಿದ್ದು, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳ ಮೇಲೆ ಬಿಜೆಪಿ ವಿಶೇಷ ಗಮನ ಹರಿಸಿದೆ. ಇದೇ ವೇಳೆ ಬಿಜೆಪಿ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಹಾಗೂ ಪ್ರಮುಖ ನಾಯಕರ ಸಭೆ ನಡೆಸಿ ಕೌಂಟರ್ ಪ್ಲ್ಯಾನ್ ರೂಪಿಸಲು ಮುಂದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ‘ಬಳ್ಳಾರಿ ಚಲೋ’ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕಾವು ಮೂಡಿಸುವ ಸಾಧ್ಯತೆಯಿದೆ.





