ಬೆಂಗಳೂರು: ಕಳೆದ ಕೆಲವು ದಿನಗಳಿಂದ ಜೈಲು ಪಾಲಾಗಿದ್ದ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜ್‌ಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣದ ಹಿನ್ನೆಲೆ
ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಬಿಕ್ಲು ಶಿವ ಎಂಬಾತನ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರನ್ನು ಎಸ್-5 (A5) ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳು, ಶಾಸಕರಿಗೆ ಬಂಧನದ ಭೀತಿ ಎದುರಾದ ಬೆನ್ನಲ್ಲೇ ಅವರು ತಲೆಮರೆಸಿಕೊಂಡಿದ್ದರು. ಆದರೆ, ಫೆಬ್ರವರಿ 12ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದರು.
ಬಂಧನದ ನಂತರ ನ್ಯಾಯಾಂಗ ಬಂಧನದಲ್ಲಿದ್ದ ಬೈರತಿ ಬಸವರಾಜ್ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯನಾಶಪಡಿಸಬಾರದು ಸೇರಿದಂತೆ ಹಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಇದರಿಂದಾಗಿ ಸುಮಾರು ಒಂದು ತಿಂಗಳ ಕಾಲ ಜೈಲುವಾಸ ಅನುಭವಿಸಿದ ಶಾಸಕರು ಈಗ ಹೊರಬರಲಿದ್ದಾರೆ.





