ಬೆಂಗಳೂರು(ಜೂನ್ 21) : ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಇಂದು( ಜೂನ್ 21) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನೇತೃತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಲಿದ್ದಾರೆ.
ಈ ಪದಗ್ರಹಣ ಸಮಾರಂಭಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಬೆಂಬಲಿಗರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,200ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನರು ಆಗಮಿಸಲಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಗೌರವಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಭಾನುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕಾಗಿ ಮುಖ್ಯ ವೇದಿಕೆಯಲ್ಲಿ ಸುಮಾರು 350 ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 200 ಮಂದಿಗೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಗಿದೆ. ಅಲ್ಲದೆ, ನಾಲ್ಕು ಸಾವಿರಕ್ಕೂ ಹೆಚ್ಚು ಬ್ಲಾಕ್ ಕಾಂಗ್ರೆಸ್ ಪ್ರತಿನಿಧಿಗಳಿಗೆ ವಿಶೇಷ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಸಮಾರಂಭದಲ್ಲಿ ಭಾಗವಹಿಸುವ ಕಾರ್ಯಕರ್ತರ ಅನುಕೂಲಕ್ಕಾಗಿ ಅರಮನೆ ಮೈದಾನದಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. 70 ಕಡೆಗಳಲ್ಲಿ ಆಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಮಸ್ಯೆಗಳು ಎದುರಾದಲ್ಲಿ ತುರ್ತು ಸೇವೆಗಾಗಿ ಆರು ಆಂಬ್ಯುಲೆನ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.
ಆರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಸರಳವಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾದರಿಯಲ್ಲೇ, ಬಿ.ಕೆ. ಹರಿಪ್ರಸಾದ್ ಅವರು ಭಾರತ್ ಜೋಡೋ ಸಭಾಂಗಣದಲ್ಲಿ ಸರಳವಾಗಿ ಅಧಿಕಾರ ಸ್ವೀಕರಿಸಲು ಉದ್ದೇಶಿಸಿದ್ದರು. ಆದರೆ ಇದು ಸರ್ಕಾರದ ಕಾರ್ಯಕ್ರಮವಲ್ಲ, ಪಕ್ಷದ ಸಂಘಟನಾ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಅದನ್ನು ಹಬ್ಬದ ಸಂಭ್ರಮದಂತೆ ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂದು ಪಕ್ಷದ ನಾಯಕರು ಒತ್ತಾಯಿಸಿದರು. ಅದರಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಸಮಾರಂಭವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
