ಯಾದಗಿರಿ, ಆಗಸ್ಟ್ 23: ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಕೂಲಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಕಾರ್ಮಿಕರನ್ನು ಹೊತ್ತ ಬೊಲೆರೊ ಪಿಕಪ್ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಬೆಳಗಿನ ಜಾವ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆಂದು ಹೋಗಿದ್ದ ಕಾರ್ಮಿಕರು, ದಿನದ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನವು ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಾಹನವು ನುಚ್ಚುನೂರಾಗಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಮೃತರು ಮತ್ತು ಗಾಯಾಳುಗಳು
ಮೃತಪಟ್ಟ ಕಾರ್ಮಿಕರನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿದ್ದವರಾಗಿದ್ದು, ದೈನಂದಿನ ಕೂಲಿ ಕೆಲಸದ ಮೇಲೆ ಜೀವನ ನಡೆಸುತ್ತಿದ್ದರು. ಈ ಘಟನೆಯಲ್ಲಿ ಸುಮಾರು 15 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಶಹಾಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಕಾರ್ಮಿಕರ ಕುಟುಂಬಸ್ಥರು ಆಕ್ರಂದನದಿಂದ ಮುಗಿಲು ಮುಟ್ಟಿದ್ದು, ಘಟನಾ ಸ್ಥಳದಲ್ಲಿ ದುಃಖದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಿಯರು ಮತ್ತು ಸಂಬಂಧಿಕರು ಆಸ್ಪತ್ರೆಗೆ ದೌಡಾಯಿಸಿದ್ದು, ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. .





