ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ

Untitled design 2026 04 30T080424.818

ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಕೇಂದ್ರ ಸರ್ಕಾರದಿಂದ ಆರ್ಥಿಕ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಿ ಮೋದಿಯ ಸಂತಾಪ ಸಂದೇಶ

ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಬೆಂಗಳೂರಿನ ಗೋಡೆ ಕುಸಿತದ ಅನಾಹುತ ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಲ್ಲದೆ, ಮೃತರ ಪ್ರತಿ ಕುಟುಂಬಕ್ಕೂ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ಇಂದ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಲಾಗಿದೆ.

ರಾಜ್ಯ ಸರ್ಕಾರದ ಪರಿಹಾರ ಘೋಷಣೆ

ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಮೃತರಲ್ಲಿ ಐವರು ಬೀದಿಬದಿ ವ್ಯಾಪಾರಿಗಳು ಮತ್ತು ಇಬ್ಬರು ಮಕ್ಕಳಿದ್ದಾರೆ ಎಂದು ದೃಢಪಟ್ಟಿದೆ.

ಘಟನೆಯ ಹಿನ್ನೆಲೆ

ಬುಧವಾರ ಸಂಜೆ ಆಲಿಕಲ್ಲಿನೊಂದಿಗೆ ಸುರಿದ ಧಾರಾಕಾರ ಮಳೆಗೆ ಗೋಡೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆಯೇ ಗೋಡೆ ಕುಸಿದು ಬಿದ್ದಿದೆ. ಈ ದುರಂತದಲ್ಲಿ ಸ್ಥಳದಲ್ಲೇ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ರಾತ್ರಿಯೇ ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಗೋಡೆ ಕುಸಿತದ ಸಂಪೂರ್ಣ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 

Exit mobile version