ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಹಬ್ಬಗಳನ್ನು ನೆಮ್ಮದಿಯಾಗಿ ಆಚರಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ವಿಸರ್ಜನೆಯ ಸಮಯದಲ್ಲಿ ಸಂಭವಿಸಿದ ಕಲ್ಲು ತೂರಾಟ ಬಗ್ಗೆ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಮದ್ದೂರಿನಲ್ಲಿ ಕಲ್ಲು ತೂರಾಟ
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಕಿಡಿಗೇಡಿಗಳ ಗುಂಪು ಕಲ್ಲು ತೂರಾಟ ನಡೆಸಿ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಈ ಘಟನೆಯಲ್ಲಿ ಮಹಿಳೆಯರು ಮತ್ತು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ರಾಜ್ಯ ಸರ್ಕಾರದ ವೈಫಲ್ಯವೇ ಇಂತಹ ಘಟನೆಗಳಿಗೆ ಕಾರಣ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳದಿರುವುದು ರಾಜ್ಯದಲ್ಲಿ ಅರಾಜಕತೆಗೆ ಕಾರಣವಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ. ಪೊಲೀಸ್ ಠಾಣೆಗಳ ಮೇಲೆ ದಾಳಿಗಳು ನಡೆದರೂ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗದಿರುವುದು, ಸರ್ಕಾರದ ಪಕ್ಷಪಾತದ ಧೋರಣೆಯನ್ನು ತೋರಿಸುತ್ತದೆ ಎಂದಿದ್ದಾರೆ. ಇದರಿಂದ ರಾಜ್ಯದಲ್ಲಿ ‘ಮೊಘಲ್ ಪ್ರೇರಿತ’ ಆಡಳಿತ ನಡೆಯುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರವು ಮದ್ದೂರು ಮತ್ತು ಸಾಗರದ ಘಟನೆಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳದಿದ್ದರೆ, ಮತಾಂಧ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ, ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.





