ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ರಾಜ್ಯದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿದ ಶಿಫಾರಸನ್ನು ಎತ್ತಿಹಿಡಿದಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ (CMA) ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಈ ಆದೇಶದ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ.
ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಕಾವೇರಿ ಕಣಿವೆಯ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ರಸ್ತೆ ತಡೆ, ಧರಣಿ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿವೆ. ರಾಜ್ಯದಲ್ಲಿ ಈಗಾಗಲೇ ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಮೊದಲು ರಾಜ್ಯದ ಕುಡಿಯುವ ನೀರು ಮತ್ತು ರೈತರ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ವತಿಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಆರ್‌ಎಸ್ ಡ್ಯಾಮ್ ಬಳಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಶಾಸಕರಾದ ಸಿ.ಟಿ. ರವಿ, ಶ್ರೀವತ್ಸ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರವು ಕಾವೇರಿ ವಿಚಾರದಲ್ಲಿ ತನ್ನ ನಿಲುವನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬರ ಪರಿಸ್ಥಿತಿ, ಕುಡಿಯುವ ನೀರಿನ ಅಭಾವ ಹಾಗೂ ರೈತರ ಸಂಕಷ್ಟವನ್ನು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದೆ ಪರಿಣಾಮಕಾರಿಯಾಗಿ ಮಂಡಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ರಾಜ್ಯದ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ, ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ರೈತ ಸಂಘಟನೆಗಳು ಒತ್ತಾಯಿಸಿವೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಕಾವೇರಿ ವಿವಾದದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ವಾತಾವರಣವೂ ಕಾವೇರಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರವೂ ತೀವ್ರಗೊಂಡಿದೆ. ಮುಂದಿನ ದಿನಗಳಲ್ಲಿ ಈ ಹೋರಾಟ ಮತ್ತಷ್ಟು ವ್ಯಾಪಕವಾಗುವ ಸಾಧ್ಯತೆ ಇದ್ದು, ಸರ್ಕಾರ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
