ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಆಗಸ್ಟ್ 14ರಂದು ನಡೆದ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಇದೀಗ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿ ವಿಶೇಷ ಘಟಕಕ್ಕೆ ಹಸ್ತಾಂತರಿಸಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರ ಆದೇಶದ ಮೇರೆಗೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸಿಐಡಿ ವಿಶೇಷ ಘಟಕ ಮುಂದಿನ ತನಿಖೆ ನಡೆಸಲಿದೆ.
ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಇದೀಗ ಈ ಎಲ್ಲ ಪ್ರಕರಣಗಳು ಸಿಐಡಿ ವ್ಯಾಪ್ತಿಗೆ ಬಂದಿವೆ.
ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆ
ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 14ರಂದು ನಡೆದ ಗುಂಡಿನ ದಾಳಿಯಲ್ಲಿ ತೋಮಿಯರ್‌ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಮೃತಪಟ್ಟಿದ್ದರು. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಯ ಬೇಟೆಗೆ ಮುಂದಾಗಿದ್ದ ಆರೋಪದ ಹಿನ್ನೆಲೆ ಅರಣ್ಯ ಸಿಬ್ಬಂದಿ ಮತ್ತು ಆರೋಪಿಗಳ ನಡುವೆ ಸಂಘರ್ಷ ನಡೆದಿದ್ದು, ಈ ವೇಳೆ ಫೈರಿಂಗ್ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿತ್ತು.
ಆದರೆ ಗುಂಡಿನ ದಾಳಿ ನಡೆದ ಪರಿಸ್ಥಿತಿ, ಮೃತರ ವಿರುದ್ಧದ ಕಳ್ಳಬೇಟೆ ಆರೋಪ ಹಾಗೂ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯಗಳ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದ್ದು, ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.





