ಹಾಸನ, ಜುಲೈ 19: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸೋಮವಾರ (ಜುಲೈ 20) ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂತ್ಯಕ್ರಿಯೆ ವೇಳೆ ಅಪಾರ ಸಂಖ್ಯೆಯಲ್ಲಿ ಗಣ್ಯರು, ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚೆನ್ನಮ್ಮ ಅವರ ಅಂತ್ಯಕ್ರಿಯೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿಯಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಹಾಗೂ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಅಂತ್ಯಕ್ರಿಯೆ ಹಿನ್ನೆಲೆ ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೆಳಗ್ಗೆ ಹೊಳೆನರಸೀಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ 9.30 ಗಂಟೆಯವರೆಗೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಕ್ಯಾತನಹಳ್ಳಿಗೆ ಕೊಂಡೊಯ್ಯಲಾಗುತ್ತದೆ.
ಮಧ್ಯಾಹ್ನ ಸುಮಾರು 2 ಗಂಟೆಯಿಂದ ಸಂಜೆ 4.15 ಗಂಟೆಯವರೆಗೆ ವಾಸ್ತು ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿವೆ. ಪುರೋಹಿತರಾದ ಕಣ್ಣನ್ ಶರ್ಮಾ, ಮಹೇಶ್ ಶರ್ಮಾ ಹಾಗೂ ನರಸಿಂಹಸ್ವಾಮಿ ಅವರ ನೇತೃತ್ವದಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ.
ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ರಾಜಕೀಯ ನಾಯಕರು, ವಿವಿಧ ಪಕ್ಷಗಳ ಮುಖಂಡರು, ಗಣ್ಯರು ಮತ್ತು ಸಾವಿರಾರು ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಹೊಳೆನರಸೀಪುರ ಪಟ್ಟಣ ಸೇರಿದಂತೆ ಅಂತ್ಯಕ್ರಿಯೆ ನಡೆಯುವ ಪ್ರದೇಶದಲ್ಲಿ 5 ಪೊಲೀಸ್ ಅಧೀಕ್ಷಕರ (SP) ನೇತೃತ್ವದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ನಿಷ್ಕ್ರೀಯ ದಳದಿಂದ ಸಂಪೂರ್ಣ ಪ್ರದೇಶವನ್ನು ಪರಿಶೀಲಿಸಲಾಗಿದೆ. ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ಟ್ರಾಫಿಕ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಗಣ್ಯರ ಆಗಮನವನ್ನು ಗಮನದಲ್ಲಿಟ್ಟುಕೊಂಡು ಅಂತ್ಯಕ್ರಿಯೆ ಸ್ಥಳದ ಸಮೀಪ ಒಟ್ಟು ಐದು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ. ರಾಜ್ಯ ಮತ್ತು ಕೇಂದ್ರದ ಪ್ರಮುಖ ನಾಯಕರು ಹೆಲಿಕಾಪ್ಟರ್ ಮೂಲಕ ಆಗಮಿಸುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಅಗತ್ಯ ಸೌಲಭ್ಯಗಳನ್ನು ಒದಗಿಸಿದೆ.
ಚೆನ್ನಮ್ಮ ಅವರ ನಿಧನದ ಹಿನ್ನೆಲೆ ಹೊಳೆನರಸೀಪುರ ಪಟ್ಟಣದ ವ್ಯಾಪಾರಿಗಳು ಕೂಡ ಸೋಮವಾರ ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಪಟ್ಟಣದಾದ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳಲಿದ್ದು, ವ್ಯಾಪಾರಿಗಳು ಸಂತಾಪ ಸೂಚಿಸಲಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಭಾನುವಾರ ಹಾಗೂ ಸೋಮವಾರ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
