ಚಿಕ್ಕಬಳ್ಳಾಪುರ: ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಜ್ಜವಾರ ಗ್ರಾಮದ ಗೇಟ್ ಬಳಿ ನಡೆದಿದೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ.
ಅಪಘಾತವು ನಿನ್ನೆ ತಡರಾತ್ರಿ ಸಂಭವಿಸಿದ್ದು, ಅತಿವೇಗವಾಗಿ ಬಂದ ಟಿಪ್ಪರ್ ವಾಹನವು ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ದುರ್ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, “ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಇಂದು ಸೂತಕದ ಮನೆಗಳಾಗಿ ಮಾರ್ಪಟ್ಟಿರುವುದು ಅತ್ಯಂತ ದುರದೃಷ್ಟಕರ. ಕುಟುಂಬದ ಆಧಾರವಾಗಿದ್ದ ಈ ಯುವಕರ ನಿಧನದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಅವರು ಅಜ್ಜವಾರ ಗ್ರಾಮಕ್ಕೆ ಭೇಟಿ ನೀಡಿ ಮೃತ ಯುವಕರ ಅಂತಿಮ ದರ್ಶನ ಪಡೆದಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಸುಧಾಕರ್, “ಇದು ಅತ್ಯಂತ ಆಘಾತಕಾರಿ ಘಟನೆ. ಒಂದೇ ಕುಟುಂಬದ ಅಣ್ಣ-ತಮ್ಮಂದಿರಿಬ್ಬರೂ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಾಯಿಗೆ ಆಧಾರವಾಗಿದ್ದ ಗಂಡು ಮಕ್ಕಳು ಒಂದೇ ಕ್ಷಣದಲ್ಲಿ ಕಳೆದುಹೋದರೆ ಆಕೆಯ ಸ್ಥಿತಿ ಊಹಿಸಲು ಕೂಡ ಸಾಧ್ಯವಿಲ್ಲ. ಇಂತಹ ನೋವು ಯಾವ ತಾಯಿಗೂ ಬರಬಾರದು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಪರಿಹಾರ ಘೋಷಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿಗಳಿಗೂ ಮೃತ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.





