ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್

Untitled design 2026 02 19T215746.971

ಚಿಕ್ಕಮಗಳೂರು: ಕಾಫಿ ನಾಡೆಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು ನಗರದಲ್ಲಿ ನೈತಿಕ ಪೊಲೀಸ್ ಗಿರಿಯೊಂದು ನಡೆದಿರುವ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪೊಂದು ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ

ಅಪ್ರಾಪ್ತ ಬಾಲಕನು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಕೆಲ ಯುವಕರು ಅವರನ್ನು ಅಡ್ಡಗಟ್ಟಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಲಕನಿಗೆ ಬೆದರಿಕೆ ಹಾಕಿ, ನೈತಿಕ ಪೊಲೀಸ್ ಗಿರಿಯಂತೆ ವರ್ತನೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯುವಕರು ಬಾಲಕನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಬಾಲಕನ ಮನೆಗೂ ತೆರಳಿ ಮತ್ತಷ್ಟು ಗಲಾಟೆ ಮಾಡಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಎಂಟು ಮಂದಿ ವಿರುದ್ಧ ಎಫ್‌ಐಆರ್

ಘಟನೆಯ ನಂತರ ಬಾಲಕನ ಸಹೋದರ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಎಂಟು ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇಬ್ಬರು ಬಂಧನ, ತನಿಖೆ ಮುಂದುವರಿಕೆ

ಈ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮೇಲ್ನೋಟಕ್ಕೆ ಇದು ನೈತಿಕ ಪೊಲೀಸ್ ಗಿರಿ ಪ್ರಕರಣವೆಂದು ತೋರುತ್ತಿದ್ದು, ಬಾಲಕ ಹಾಗೂ ಬಾಲಕಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

“ಬಾಲಕನ ಮನೆಗೂ ಹೋಗಿ ಹಲ್ಲೆಗೆ ಯತ್ನಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಇತರ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಎಸ್ಪಿ ತಿಳಿಸಿದ್ದಾರೆ.

Exit mobile version