ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ

Untitled design 2025 12 25T115629.885

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತವು ಇಡೀ ದೇಶವನ್ನೇ ಕಂಗೆಡಿಸಿದೆ. ಲಾರಿ ಮತ್ತು ಬಸ್ ನಡುವಿನ ಡಿಕ್ಕಿಯಿಂದಾಗಿ ಸಂಭವಿಸಿದ ಈ ಅಗ್ನಿ ದುರಂತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ ಘೋರ ಘಟನೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆರ್ಥಿಕ ನೆರವು  ಘೋಷಿಸಿದ್ದಾರೆ.

ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ

ದುರಂತದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ರಜೆಯ ಮೋಜಿನಲ್ಲಿದ್ದವರ ಪ್ರಯಾಣ ಹೀಗೆ ಮಸಣದಲ್ಲಿ ಅಂತ್ಯಗೊಂಡಿದ್ದು ಕೇಳಿ ಎದೆ ನಡುಗಿತು. ಘಟನೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕದ ಚಿತ್ರದುರ್ಗದಲ್ಲಿ ನಡೆದ ಅಪಘಾತದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಾಂತ್ವನಗಳು ಎಂದು ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾರಿಗೆ ಸಚಿವರು ಖಾಸಗಿ ಬಸ್‌ಗಳ ಸುರಕ್ಷತಾ ಕ್ರಮಗಳ ಬಗ್ಗೆ ವರದಿ ಕೇಳಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಈ ದುರಂತ ಸಂಭವಿಸಿತ್ತು. ಬಸ್ಸಿನಲ್ಲಿದ್ದ ಪ್ರಯಾಣಿಕರು ಹೊರಬರಲಾಗದೆ ಬೆಂಕಿಗೆ ಆಹುತಿಯಾಗಿದ್ದರು. ಲಾರಿ ಚಾಲಕನ ಅಜಾಗರೂಕತೆಯೇ ಈ ಭೀಕರ ಘಟನೆಗೆ ಮುಖ್ಯ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

Exit mobile version