ಬೆಂಗಳೂರು (ಜೂನ್ 29) :ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದ್ದು, ಸಾವಿರಾರು ಕೊಳವೆಬಾವಿಗಳು ಬತ್ತಿ ಹೋಗಿವೆ. ಇದರ ಪರಿಣಾಮ ಅಡಿಕೆ ಮತ್ತು ತೆಂಗಿನ ತೋಟಗಳು ನೀರಿನ ಕೊರತೆಯಿಂದ ಒಣಗುತ್ತಿದ್ದು, ಅಪಾರ ಲಾಭದ ನಿರೀಕ್ಷೆಯಲ್ಲಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ
- ಅಂತರ್ಜಲ ಮಟ್ಟ ಕುಸಿದು ಬತ್ತಿ ಹೋದ ಕೊಳವೆಬಾವಿಗಳು
- ಒಣಗುತ್ತಿವೆ ಅಡಿಕೆ ಹಾಗೂ ತೆಂಗಿನ ತೋಟಗಳು
- ಸಾಲ ಮಾಡಿ ಬೆಳೆ ಬೆಳೆದ ರೈತರು ಆರ್ಥಿಕ ಸಂಕಷ್ಟ
- ಸರ್ಕಾರದಿಂದ ಪರಿಹಾರ ಹಾಗೂ ನೀರಾವರಿ ಯೋಜನೆಗೆ ಆಗ್ರಹ
ಕಳೆದ ಕೆಲವು ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕೆರೆ ತುಂಬಿಸುವ ಯೋಜನೆಗಳು ಜಾರಿಗೆ ಬರುತ್ತವೆ ಎಂಬ ನಿರೀಕ್ಷೆಯಲ್ಲಿ ಅನೇಕ ರೈತರು ಸಾಲ ಮಾಡಿ ಕೊಳವೆಬಾವಿ ಕೊರೆಸಿ ಅಡಿಕೆ ಮತ್ತು ತೆಂಗಿನ ತೋಟಗಳನ್ನು ಬೆಳೆಸಿದ್ದರು. ಆದರೆ ಯೋಜನೆಗಳು ನಿರೀಕ್ಷಿತ ರೀತಿಯಲ್ಲಿ ಜಾರಿಯಾಗದೇ, ಈ ವರ್ಷ ಮಳೆಯೂ ಕೈಕೊಟ್ಟ ಕಾರಣ ಕೊಳವೆಬಾವಿಗಳಲ್ಲಿ ನೀರು ಸಂಪೂರ್ಣ ಬತ್ತಿದೆ.
ಅಂತರ್ಜಲ ಮಟ್ಟ ಕುಸಿದಿರುವ ಪರಿಣಾಮ ತೋಟಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಹಲವು ವರ್ಷಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ ಅಡಿಕೆ ಹಾಗೂ ತೆಂಗಿನ ಗಿಡಗಳು ರೈತರ ಕಣ್ಣೆದುರೇ ಒಣಗುತ್ತಿವೆ. ನೀರಿನ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದೇ ಕೆಲ ರೈತರು ಗಿಡಗಳನ್ನೇ ಕಡಿದುಹಾಕುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಅಡಿಕೆ ತೋಟ ಸ್ಥಾಪನೆಗಾಗಿ ಲಕ್ಷಾಂತರ ರೂಪಾಯಿ ಸಾಲ ಪಡೆದಿರುವ ರೈತರು ಈಗ ಸಾಲ ಮರುಪಾವತಿ ಮಾಡುವ ಚಿಂತೆಯಲ್ಲಿ ಮುಳುಗಿದ್ದಾರೆ. ಬೆಳೆ ಇಲ್ಲ, ಆದಾಯ ಇಲ್ಲದ ಕಾರಣ ಕುಟುಂಬ ನಿರ್ವಹಣೆಯೂ ಕಷ್ಟಕರವಾಗಿದೆ. ಕೆಲವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.
ರೈತ ಮುಖಂಡರ ಪ್ರಕಾರ, ಬರಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ, ಬೆಳೆ ನಷ್ಟ ಪರಿಹಾರ, ಸಾಲ ಮರುಪಾವತಿಗೆ ವಿನಾಯಿತಿ ಹಾಗೂ ಕುಡಿಯುವ ನೀರು ಮತ್ತು ಕೃಷಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಜೊತೆಗೆ ಭದ್ರಾ ಮೇಲ್ದಂಡೆ ಹಾಗೂ ಕೆರೆ ತುಂಬಿಸುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಬರಗಾಲದ ಹಿನ್ನೆಲೆಯಲ್ಲಿ ಯಾದಗಿರಿ, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ದೇವರ ಮೊರೆ ಹೋಗಿ ವಿಶೇಷ ಪೂಜೆ, ಭಜನೆ, ರುದ್ರಾಭಿಷೇಕ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ್ದಾರೆ.
ಮುಂಗಾರು ಚುರುಕುಗೊಂಡು ರಾಜ್ಯಾದ್ಯಂತ ಉತ್ತಮ ಮಳೆಯಾದರೆ ಮಾತ್ರ ರೈತರ ಸಂಕಷ್ಟ ನಿವಾರಣೆಯಾಗಲಿದೆ. ಸದ್ಯ ಅನ್ನದಾತರು ದೇವರ ಮೊರೆ ಹೋಗಿ ಪ್ರಕೃತಿಯ ಕೃಪೆಗೆ ಕಾಯುತ್ತಿರುವುದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಂಡುಬಂದಿದೆ.





