ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಿನ್ನೆ ರಾತ್ರಿ, ಕಾರು ಮತ್ತು ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಘಟನೆಯ ವಿವರ:
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ಈ ಘೋರ ದುರಂತ ನಡೆದಿದೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ 150ಎ ನಲ್ಲಿ ವೇಗವಾಗಿ ಬಂದ ಕ್ಯಾಂಟರ್ ಲಾರಿ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅವಶೇಷಗಳು ರಸ್ತೆಯಾದ್ಯಂತ ಹರಡಿಕೊಂಡಿದ್ದವು. ಕಾರಿನಲ್ಲಿದ್ದ ನಾಲ್ವರು ಯುವಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರೆಲ್ಲರೂ ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ನಿವಾಸಿಗಳೆಂದು ಗುರುತಿಸಲಾಗಿದೆ. ಮೃತರನ್ನು ವಿಶ್ವನಾಥ್ (22 ವರ್ಷ), ನಂಜುಂಡಿ (23 ವರ್ಷ), ರಾಹುಲ್ (23 ವರ್ಷ), ಯಶ್ವಂತ್ (22 ವರ್ಷ) ಎಂದು ಗುರುತಿಸಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತ ನಡೆದಿದ್ದು ಹೇಗೆ ?
ಮೃತ ಯುವಕರು ಹುಳಿಯಾರಿನಿಂದ ಹಿರಿಯೂರು ಕಡೆಗೆ ತಮ್ಮ ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದವರು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು ಎನ್ನಲಾಗಿದೆ.ಕೂಡಲೇ ಸ್ಥಳಿಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಪೊಲೀಸ್ ಭೇಟಿ ಮತ್ತು ತನಿಖೆ:
ಈ ಬಗೆ ತಿಳಿದ ಹಿರಿಯೂರು ಗ್ರಾಮಾಂತರ ಠಾಣೆಯ ಸಿಪಿಐ ಆನಂದ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೊಳಗಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಅತಿ ವೇಗ ಅಥವಾ ಚಾಲಕನ ಅಜಾಗರೂಕತೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿ ಸುರಕ್ಷತೆಯ ಬಗ್ಗೆ ಕಳವಳ:
ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆ ಹಾಗೂ ಅತಿಯಾದ ವೇಗ ಇಂತಹ ಅಮಾಯಕರ ಪ್ರಾಣ ಹೋಗಲು ಕಾರಣವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.





