ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

Untitled design 2026 05 30T191642.819

ಬೆಂಗಳೂರು (ಮೇ 30): ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವು ಪಡೆಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಸಚಿವರು ಹಾಗೂ ರಾಜ್ಯಸಭಾ ಸದಸ್ಯರು ಒಟ್ಟಾಗಿ ಕೈ ಎತ್ತುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದ್ದು, ಡಿ.ಕೆ. ಶಿವಕುಮಾರ್ ಅವರ ನಾಯಕತ್ವಕ್ಕೆ ಪಕ್ಷದೊಳಗಿನ ಒಗ್ಗಟ್ಟು ಮತ್ತೊಮ್ಮೆ ಸಾಬೀತಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ ಸಭೆಯಲ್ಲಿ ಹಾಜರಿದ್ದ ಎಲ್ಲಾ ಶಾಸಕರು ಮತ್ತು ಮುಖಂಡರು ಬೆಂಬಲ ಸೂಚಿಸಿದರು. ಬಳಿಕ ಸಭಾಂಗಣದಲ್ಲಿದ್ದ ಸದಸ್ಯರೆಲ್ಲರೂ ಕೈ ಎತ್ತಿ ಒಮ್ಮತ ವ್ಯಕ್ತಪಡಿಸಿದರು.

ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಪರವಾಗಿ ಘೋಷಣೆಗಳು ಮೊಳಗಿದವು. “ಡಿಕೆಶಿ ಜಿಂದಾಬಾದ್”, “ಮುಂದಿನ ಮುಖ್ಯಮಂತ್ರಿ ಡಿಕೆಶಿ” ಎಂಬ ಘೋಷಣೆಗಳೊಂದಿಗೆ ಶಾಸಕರು ತಮ್ಮ ಸಂತಸ ವ್ಯಕ್ತಪಡಿಸಿದರು. ಪಕ್ಷದ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ ಸದಸ್ಯರು, ಮುಂದಿನ ದಿನಗಳಲ್ಲಿ ರಾಜ್ಯದ ಆಡಳಿತವನ್ನು ಯಶಸ್ವಿಯಾಗಿ ಮುನ್ನಡೆಸುವ ಸಾಮರ್ಥ್ಯ ಡಿ.ಕೆ. ಶಿವಕುಮಾರ್ ಅವರಲ್ಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಶಾಸಕಾಂಗ ಪಕ್ಷದ ಸಭೆಗೂ ಮುನ್ನ ನಡೆದ ಒಂದು ವಿಶೇಷ ಘಟನೆ ಎಲ್ಲರ ಗಮನ ಸೆಳೆಯಿತು. ಸಭೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನೊಣವಿನಕೆರೆ ಅಜ್ಜಯ್ಯ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ಈ ಪೂಜೆಯನ್ನು ನೆರವೇರಿಸಲಾಗಿದೆ ಎನ್ನಲಾಗಿದೆ.

ಪೂಜೆ ವೇಳೆ ಡಿ.ಕೆ. ಶಿವಕುಮಾರ್ ಅವರು ತಮ್ಮ ಕೊಠಡಿಯಲ್ಲಿದ್ದ ಆಪ್ತರು, ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಏಕಾಂತದಲ್ಲಿ ದೇವರ ಆರಾಧನೆ ನಡೆಸಿದರು. 

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಶಾಸಕರಿಂದ ಭರ್ಜರಿ ಬೆಂಬಲ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಿಎಲ್‌ಪಿ ಸಭೆಯ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

 

Exit mobile version