ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಮಾತುಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನಿತ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ರಾಜೀನಾಮೆ ನೀಡಲು ಯಾರೇ ಮುಂದಾದರೂ ಅವರನ್ನು ತಡೆಯುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಅದನ್ನು ಅಂಗೀಕರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಮಾತನಾಡಿದ ಸಿಎಂ, ರಾಜಕೀಯದಲ್ಲಿ ಇಂತಹ ಬೆಳವಣಿಗೆಗಳು ಸಹಜ. ಆದರೆ ವೈಯಕ್ತಿಕ ಹುದ್ದೆಗಳಿಗಿಂತ ಪಕ್ಷವೇ ದೊಡ್ಡದು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಇರಬೇಕು ಎಂದು ಹೇಳಿದರು.
ಕೆಲವು ಶಾಸಕರು ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ನನಗೂ ಹಾಗೂ ಜಿ. ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಸಿಗಲಿಲ್ಲ. ಆಗ ನಾವು ಕೂಡ ರಾಜೀನಾಮೆ ನೀಡಬಹುದಿತ್ತು. ಆದರೆ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಾಳ್ಮೆಯಿಂದ ಇದ್ದೆವು. ಅದೇ ರೀತಿ ಹಿರಿಯ ನಾಯಕ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಎಸ್. ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ನಂತರ ಅವರು ಮುಖ್ಯಮಂತ್ರಿಯಾದರು. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಒಂದು ಹಂತದಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ರಾಜಕೀಯದಲ್ಲಿ ತಾಳ್ಮೆ ಬಹಳ ಮುಖ್ಯ” ಎಂದು ಹೇಳಿದರು.
ಹುದ್ದೆ ಸಿಗಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸುವ ಬದಲು ಪಕ್ಷದ ಸಂಘಟನೆ ಬಲಪಡಿಸುವ ಕೆಲಸಕ್ಕೆ ಎಲ್ಲರೂ ಮುಂದಾಗಬೇಕು. ಪಕ್ಷದ ಭವಿಷ್ಯ ಹಾಗೂ ಸಂಘಟನೆಯ ಹಿತವೇ ಎಲ್ಲಕ್ಕಿಂತ ಮುಖ್ಯವಾಗಿದ್ದು, ರಾಜಕೀಯ ಭವಿಷ್ಯವನ್ನು ಕಟ್ಟಿಕೊಳ್ಳಬೇಕಾದರೆ ಪಕ್ಷದೊಂದಿಗೆ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳ ಕುರಿತು ಮಾತನಾಡಿದ ಅವರು, ಎಲ್ಲರೂ ರಾಜೀನಾಮೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಎರಡುವರೆ ವರ್ಷದ ಅವಧಿಯ ನಂತರ ಈ ಬದಲಾವಣೆ ನಡೆಯಲಿದೆ ಎಂಬ ಮಾಹಿತಿಯನ್ನು ಮುಂಚಿತವಾಗಿಯೇ ಶಾಸಕರು ಹಾಗೂ ಸಚಿವರಿಗೆ ನೀಡಲಾಗಿತ್ತು. ಮೊದಲ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ನಂತರ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನೇಮಕಾತಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಹೊಸ ಬೆಳವಣಿಗೆಗಳಿದ್ದರೆ ತಾವೇ ಮಾಧ್ಯಮಗಳ ಮುಂದೆ ಬಂದು ಮಾಹಿತಿ ನೀಡುವುದಾಗಿ ಹೇಳಿದರು.
ಇದರ ಜೊತೆಗೆ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯ ಕುರಿತು ಸಚಿವರಿಗೆ ಮಹತ್ವದ ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದರು. ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಎಲ್ಲ ಸಚಿವರು ತಕ್ಷಣವೇ ತಮಗೆ ನೀಡಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಮಳೆ ಹಾಗೂ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಈ ಪ್ರವಾಸಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಅಧಿಕಾರಿಗಳು ಕಲ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
