ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ನಡೆಯಲಿರುವ ಈ ವಿಶೇಷ ಉಪಾಹಾರ ಸಭೆ ಇದೀಗ ಕಾಂಗ್ರೆಸ್ ಪಾಳಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಹೈಕಮಾಂಡ್ ಮಟ್ಟದ ರಾಜಕೀಯ ಚಟುವಟಿಕೆಗಳ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಉಪಾಹಾರ ಕೂಟಕ್ಕೆ ಆಹ್ವಾನ ನೀಡಿದ್ದಾರೆ.

ಇದಕ್ಕೂ ಮೊದಲು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದ ಡಿ.ಕೆ. ಶಿವಕುಮಾರ್ ನಾಳೆ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ ಸುಮಾರು 8.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ತಲುಪಲಿರುವ ಡಿಕೆಶಿ, ನೇರವಾಗಿ ಸಿಎಂ ನಿವಾಸಕ್ಕೆ ತೆರಳಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಕೇವಲ ಮಾತುಕತೆ ನಡೆಯುತ್ತದೆಯೇ ಅಥವಾ ಸರ್ಕಾರದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಲೆಕ್ಕಾಚಾರಗಳ ಪ್ರಕಾರ, ಈ ಸಭೆ ಸರ್ಕಾರದ ಒಳರಾಜಕೀಯಗಳಿಗೆ ಹೊಸ ತಿರುವು ನೀಡುವ ಸಾಧ್ಯತೆ ಇದೆ.

ಮುಖ್ಯವಾಗಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ವದಂತಿಗಳು ಜೋರಾಗಿರುವ ಸಮಯದಲ್ಲೇ ಈ ಸಭೆ ನಡೆಯುತ್ತಿರುವುದು ವಿಶೇಷ. ಕೆಲವು ಮೂಲಗಳ ಪ್ರಕಾರ, ಪಕ್ಷದೊಳಗಿನ ಅಸಮಾಧಾನ ಶಮನ, ನಾಯಕತ್ವದ ಬಗ್ಗೆ ಸ್ಪಷ್ಟ ಸಂದೇಶ ಹಾಗೂ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳಿಗೂ ಇದೇ ಉಪಾಹಾರ ಕೂಟಕ್ಕೆ ಆಹ್ವಾನ ನೀಡಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ “ಸಿಎಂ ರಾಜೀನಾಮೆಗೂ ಮುನ್ನದ ಮಹತ್ವದ ಸಭೆಯೇ ಇದು?” ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಈ ಎಲ್ಲ ಬೆಳವಣಿಗೆಗಳನ್ನು ಸಾಮಾನ್ಯ ರಾಜಕೀಯ ಸಭೆ ಎಂದು ಬಣ್ಣಿಸಲು ಪ್ರಯತ್ನಿಸುತ್ತಿದ್ದಾರೆ.

Exit mobile version