ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

Untitled design 2026 03 12T102536.077

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಇದೀಗ ಭಾರತದ ಮಾರುಕಟ್ಟೆಯ ಮೇಲೂ ಬಿದ್ದಿದೆ. ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಯ ನಡುವೆ, ಅಡುಗೆ ಎಣ್ಣೆ, ಬೇಳೆ ಕಾಳು ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆಯಾಗಿದೆ. ಇದರಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಯುಗಾದಿ ಹಾಗೂ ರಂಜಾನ್ ಹಬ್ಬಗಳು ಸಮೀಪಿಸುತ್ತಿರುವ ಸಮಯದಲ್ಲೇ ಈ ಬೆಲೆ ಏರಿಕೆ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಿದೆ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಮನೆಗಳಲ್ಲಿ ವಿಶೇಷ ಆಹಾರ ತಯಾರಿಕೆ ನಡೆಯುವುದರಿಂದ ದಿನಸಿ ವಸ್ತುಗಳ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಇದೇ ಸಮಯದಲ್ಲಿ ಬೆಲೆ ಏರಿಕೆ ಆಗಿರುವುದರಿಂದ ಜನರು ಕಂಗಾಲಾಗಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ದಿನಸಿ ಅಂಗಡಿಗಳಲ್ಲಿ ಈಗಾಗಲೇ ಖರೀದಿ ಜೋರಾಗಿದೆ. ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಹಲವರು ಈಗಿನಿಂದಲೇ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಬೆಲ್ಲ, ಸಕ್ಕರೆ ಸೇರಿದಂತೆ ವಿವಿಧ ದಿನಸಿ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಅದೇ ರೀತಿ ತೊಗರಿ ಬೇಳೆ, ಉದ್ದಿನ ಬೇಳೆ, ಕಡಲೆ ಬೇಳೆ ಸೇರಿದಂತೆ ಹಲವು ಬೇಳೆ ಕಾಳುಗಳ ಬೆಲೆ ಕೂಡ ಏರಿಕೆಯಾಗಿದೆ. ಅಕ್ಕಿ ಮತ್ತು ಬೆಲ್ಲದ ದರವೂ ಕೆಲವು ಪ್ರದೇಶಗಳಲ್ಲಿ ಹೆಚ್ಚಳ ಕಂಡಿದೆ. ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ವಿಶೇಷವಾಗಿ ಕೆಳ ಮಧ್ಯಮ ವರ್ಗದ ಜನರು ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಇಂಧನ ಹಾಗೂ ಸಾಗಣೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಇದರಿಂದ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿದ್ದು, ಕೆಲವು ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಕಾರಣಗಳಿಂದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರ ಜೊತೆಗೆ ಕೆಲವು ಕೃಷಿ ಉತ್ಪನ್ನಗಳ ಉತ್ಪಾದನೆ ಕಡಿಮೆಯಾಗಿರುವುದೂ ಬೆಲೆ ಏರಿಕೆಗೆ ಮತ್ತೊಂದು ಕಾರಣವಾಗಿದೆ.

Exit mobile version