ಮಂಗಳೂರು (ಜುಲೈ 8): ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಜಿಲ್ಲೆಗಳಲ್ಲಿ ಇಂದು (ಜುಲೈ 8, ಬುಧವಾರ) ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರಮುಖ ತಾಲೂಕುಗಳಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ಕಡ್ಡಾಯ ರಜೆ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51(b) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸೋಮಶೇಖರ್ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಪ್ಪಾಣಿ, ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಸುರಕ್ಷಿತವಾಗಿರಲು ಹಾಗೂ ಮಳೆಯ ಪರಿಣಾಮದಿಂದ ಯಾವುದೇ ಅನಾಹುತ ಸಂಭವಿಸದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ ಸಾಗರ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಇನ್ನೊಂದೆಡೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಳೆಯ ತೀವ್ರತೆ ಮುಂದುವರಿದಿರುವ ಕಾರಣ ಇಂದು ಬುಧವಾರದಂದು ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಕುರಿತು ಸಾಗರ ತಹಶೀಲ್ದಾರ್ ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ.
ಮಳೆ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳು ಮನವಿ ಮಾಡಿವೆ. ನದಿ, ಹಳ್ಳ-ಕೊಳ್ಳ, ಜಲಪಾತ ಹಾಗೂ ತಗ್ಗು ಪ್ರದೇಶಗಳ ಬಳಿ ತೆರಳಬಾರದು ಎಂದು ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಿಗೂ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವುದರಿಂದ, ಸಂಬಂಧಪಟ್ಟ ಜಿಲ್ಲೆಗಳ ಜನರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಿ ಸುರಕ್ಷತೆ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ.
