ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿ ಅಥವಾ ಅಪ್ರೂವರ್ ಆಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾ. ವಿ. ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಪ್ರದೋಷ್ ಅವರನ್ನು ವಿಚಾರಣೆಯ ಸಂದರ್ಭದಲ್ಲಿ ಕ್ರಾಸ್ ಎಗ್ಸಾಮಿನೇಷನ್ ಮಾಡಲು ಆರೋಪಿಗಳಿಗೆ ಅವಕಾಶ ಇರುವುದರಿಂದ, ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿರುವ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂಬುದು ಪ್ರಕರಣದ ಆರೋಪವಾಗಿದೆ. 2024ರ ಜೂನ್‌ನಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.
ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ವಿರುದ್ಧ ಸಾಕ್ಷ್ಯ ನಾಶಪಡಿಸಲು ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾದ ಆರೋಪಗಳಿದ್ದವು. ಬಳಿಕ ಪ್ರಕರಣದ ಸಂಪೂರ್ಣ ವಿಚಾರವನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ತಿಳಿಸಿ ಅವರು ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯವು ಈ ಅರ್ಜಿಯನ್ನು ಪುರಸ್ಕರಿಸಿ ಅವರನ್ನು ಅಪ್ರೂವರ್ ಆಗಿ ಪರಿಗಣಿಸಲು ಅವಕಾಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದರಿಂದ ಪ್ರಕರಣದ ವಿಚಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಅರ್ಜಿದಾರರ ವಾದವಾಗಿತ್ತು. ಆದರೆ ಹೈಕೋರ್ಟ್, ಸಾಕ್ಷಿಯ ಹೇಳಿಕೆಯನ್ನು ಕ್ರಾಸ್ ಎಗ್ಸಾಮಿನೇಷನ್ ಮೂಲಕ ಪ್ರಶ್ನಿಸಲು ಆರೋಪಿಗಳಿಗೆ ಕಾನೂನುಬದ್ಧ ಅವಕಾಶವಿದೆ ಎಂಬ ಅಂಶವನ್ನು ಗಮನಿಸಿದೆ.
ಹೀಗಾಗಿ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಿ ನೀಡಬಹುದಾದ ಹೇಳಿಕೆಗಳು ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆಯುವ ಸಾಧ್ಯತೆ ಇದೆ.
