ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು, ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ, ಮುಂದಿನ ವಿಚಾರಣಾ ದಿನಗಳಂದು ತಮ್ಮನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳು ಹಾಗೂ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ದರ್ಶನ್ ಸಲ್ಲಿಸಿರುವ ಅರ್ಜಿಯಲ್ಲಿ, ಕ್ರಿಮಿನಲ್ ಕಾನೂನಿನ ಮೂಲಭೂತ ತತ್ವಗಳ ಪ್ರಕಾರ ಆರೋಪಿಯ ಸಮಕ್ಷಮದಲ್ಲೇ ಸಾಕ್ಷಿಗಳ ವಿಚಾರಣೆ ನಡೆಯಬೇಕು ಎಂದು ವಾದಿಸಲಾಗಿದೆ. ಪ್ರಕರಣದ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿರುವ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದಾಗಿ ವಿಡಿಯೋ ಪ್ರಸಾರದಲ್ಲಿ ಆಗಾಗ ವ್ಯತ್ಯಯ ಉಂಟಾಗುತ್ತಿದೆ. ಹೀಗಾಗಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಸಮರ್ಪಕವಾಗಿ ಗಮನಿಸಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಪ್ರಮುಖ ಸಾಕ್ಷಿಗಳ ವಿಚಾರಣೆ ಹಾಗೂ ಪಾಟಿಸವಾಲು ನಡೆಯುತ್ತಿರುವ ಈ ಹಂತದಲ್ಲಿ ಆರೋಪಿಯ ಖುದ್ದು ಹಾಜರಿ ಅತ್ಯಗತ್ಯವಾಗಿದೆ. ಸಾಕ್ಷಿಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ವಿಚಾರಣೆಯ ಸಂದರ್ಭದಲ್ಲಿ ವಕೀಲರಿಗೆ ಅಗತ್ಯ ಸೂಚನೆಗಳನ್ನು ನೀಡಲು ತಮ್ಮನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಬೇಕು ಎಂದು ದರ್ಶನ್ ಕೋರಿದ್ದಾರೆ.
ಅಲ್ಲದೆ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಘಟನೆ 2024ರ ಜುಲೈ 1ಕ್ಕೂ ಮುನ್ನ ನಡೆದಿರುವುದರಿಂದ ಹಳೆಯ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ)ಯ ನಿಯಮಗಳೇ ಅನ್ವಯವಾಗುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ಸಮಕ್ಷಮದಲ್ಲಿ ಸಾಕ್ಷ್ಯ ದಾಖಲಿಸುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ, 2026ರ ಆಗಸ್ಟ್ 17ರಂದು ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ 2024ರ ಜೂನ್ 9ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಹಾಗೂ ಸಾಕ್ಷ್ಯನಾಶ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಜೂನ್ 11ರಂದು ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು ಒಟ್ಟು 17 ಆರೋಪಿಗಳ ವಿರುದ್ಧ 2024ರ ಸೆಪ್ಟೆಂಬರ್ 2ರಂದು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನಂತರ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ಆ ಜಾಮೀನನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ದರ್ಶನ್ ಅವರು 2025ರ ಆಗಸ್ಟ್ 15ರಂದು ಮತ್ತೆ ಶರಣಾಗಿದ್ದರು. ಅಂದಿನಿಂದ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಕರಣದ ವಿಚಾರಣೆ 2025ರ ಡಿಸೆಂಬರ್ 17ರಂದು ಆರಂಭವಾಗಿದ್ದು, ಇದುವರೆಗೆ ಪ್ರಾಸಿಕ್ಯೂಷನ್ ಪರವಾಗಿ 24 ಸಾಕ್ಷಿಗಳ ವಿಚಾರಣೆ ನಡೆದಿದೆ. ಈ ಹಂತದಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ವೇಳೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ದರ್ಶನ್ ಅವರು 2026ರ ಮೇ 22ರಂದು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದೇ ಪರಿಣಾಮಕಾರಿ ಎಂದು ಪ್ರಾಸಿಕ್ಯೂಷನ್ ಆಕ್ಷೇಪಿಸಿತ್ತು. ಎರಡೂ ಕಡೆಯ ವಾದಗಳನ್ನು ಆಲಿಸಿದ ನಗರದ 58ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸಷನ್ಸ್ ನ್ಯಾಯಾಲಯವು ಆಗಸ್ಟ್ 17ರಂದು ದರ್ಶನ್ ಅವರ ಮನವಿಯನ್ನು ತಿರಸ್ಕರಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ.





