ಕಾಂಗ್ರೆಸ್ ಹಿರಿಯ ನಾಯಕ ಹೆಚ್.ವೈ ಮೇಟಿ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸಂತಾಪ

Untitled design 2025 11 04t142245.614

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರೂ, ಮಾಜಿ ಸಚಿವರೂ, ಉತ್ತರ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರೂ ಆದ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಗಳಲ್ಲಿ ಟ್ವೀಟ್ ಮಾಡಿ ಆಳವಾದ ಸಂತಾಪ ಸೂಚಿಸಿದ್ದಾರೆ.

ಉತ್ತರ ಕರ್ನಾಟಕದ ಜನಪರ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳಿಗೆ ಯಾವಾಗಲೂ ಆದ್ಯತೆ ನೀಡುತ್ತಿದ್ದರು. ಮಾಜಿ ಸಚಿವರಾಗಿ ಸರ್ಕಾರದಲ್ಲಿ ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಸ್ಥಾನವನ್ನು ಹೊಂದಿದ್ದರು.

ಡಿಸಿಎಂ ಡಿಕೆ ಶಿವಕುಮಾರ್‌‌ ಸಂತಾಪ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೂ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್‌ನಲ್ಲಿ ಆಳವಾದ ದುಃಖವನ್ನು ವ್ಯಕ್ತಪಡಿಸಿದ್ದಾರೆ. “ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವು ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೇಟಿ ಅವರನ್ನು “ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮುತ್ಸದ್ಧಿ ನಾಯಕರು” ಎಂದು ಕರೆದಿರುವ ಸಿಎಂ, ಅವರ ನಿಧನದಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ. “ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಹೆಚ್.ವೈ ಮೇಟಿ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದ ಅವರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಮೇಟಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಸಿಎಂ ಸಿದ್ದರಾಮಯ್ಯ ಅವರು ಸ್ವತಃ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

Exit mobile version