ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳು ಹರಿದಾಡುತ್ತಿದ್ದಂತೆ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಸಂಚಲನ ಉಂಟಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಜ್ಯ ಸರ್ಕಾರವು ಡಿಜಿಪಿ ರಾಮಚಂದ್ರ ರಾವ್ ಅವರನ್ನು ತಕ್ಷಣವೇ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದು, ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ.
ಮಹಿಳಾ ಆಯೋಗ ಬರೆದಿರುವ ಪತ್ರದಲ್ಲಿ, ಐಪಿಎಸ್ ಅಧಿಕಾರಿ ಡಾ. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ, ಸಮವಸ್ತ್ರ ಧರಿಸಿದ್ದ ಸಂದರ್ಭದಲ್ಲಿಯೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ದೃಶ್ಯಾವಳಿಗಳ ಮೂಲಕ ತಿಳಿದುಬಂದಿದೆ ಎಂದು ಉಲ್ಲೇಖಿಸಲಾಗಿದೆ. ವಿಡಿಯೋ ದೃಶ್ಯಗಳನ್ನು ಆಧಾರವಾಗಿಸಿಕೊಂಡು ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಉನ್ನತ ಹುದ್ದೆಯ ಪೊಲೀಸ್ ಅಧಿಕಾರಿ ಈ ರೀತಿಯ ಅಸಭ್ಯ ಹಾಗೂ ಅನೈತಿಕ ವರ್ತನೆಯಲ್ಲಿ ತೊಡಗಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಮಹಿಳಾ ಆಯೋಗ ಅಭಿಪ್ರಾಯಪಟ್ಟಿದೆ. ಇಂತಹ ಘಟನೆಗಳು ರಾಜ್ಯದ ಮಹಿಳೆಯರಲ್ಲಿ ಭಯ ಮತ್ತು ಅಸಹಜ ಭಾವನೆಯನ್ನು ಮೂಡಿಸುವುದಲ್ಲದೇ, ನಾಗರಿಕ ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ಈ ಪ್ರಕರಣವು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ 2013ರ ಅಡಿಯಲ್ಲಿ ತನಿಖೆಗೆ ಅರ್ಹವಾಗಿರುವುದಾಗಿ ಮಹಿಳಾ ಆಯೋಗ ಸ್ಪಷ್ಟಪಡಿಸಿದೆ. ಆದ್ದರಿಂದ ಈ ಪತ್ರ ಸ್ವೀಕರಿಸಿದ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ.
ಕೈಗೊಂಡ ಕ್ರಮಗಳು ಹಾಗೂ ತನಿಖೆಯ ಪ್ರಗತಿಯ ಕುರಿತು ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಸರ್ಕಾರಕ್ಕೆ ಗಡುವು ನೀಡಿದೆ. ಜೊತೆಗೆ ಮಹಿಳೆಯರ ಘನತೆ, ಗೌರವ ಹಾಗೂ ಸುರಕ್ಷತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಯೋಗ ಆಗ್ರಹಿಸಿದೆ. ಇಂತಹ ಪ್ರಕರಣಗಳಲ್ಲಿ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವುದು ಅನಿವಾರ್ಯ ಎಂದು ಮಹಿಳಾ ಆಯೋಗ ತನ್ನ ಪತ್ರದಲ್ಲಿ ಒತ್ತಿ ಹೇಳಿದೆ.
ಈ ನಡುವೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ವಕೀಲ ನರೇಶ್ ಕುಮಾರ್ ಎಂಬವರು ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಬೇಕು ಮತ್ತು ಆರೋಪ ಸಾಬೀತಾದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





