ಧಾರವಾಡ, ಜುಲೈ 22: ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಮೀಪ ಬುಧವಾರ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಬಸ್ ಚಾಲಕ ಸೇರಿದಂತೆ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ದಾವಣಗೆರೆಯಿಂದ ಮಹಾರಾಷ್ಟ್ರದ ಮಿರಜ್‌ಗೆ ತೆರಳುತ್ತಿತ್ತು. ಸರ್ಕಾರಿ ಬಸ್ ಧಾರವಾಡ ಹೊರವಲಯದ ಅಮ್ಮಿನಬಾವಿ ಗ್ರಾಮದ ಬಳಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಬಸ್‌ನ ಮುಂಭಾಗದ ಎಕ್ಸಲ್ ಮುರಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಪಲ್ಟಿಯಾಗಿದೆ. ಅಪಘಾತದಿಂದ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಗಾಜುಗಳು ಚೂರಾಗಿವೆ.
ಈ ದುರ್ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಮುನವಳ್ಳಿ ಗ್ರಾಮದ ನಿವಾಸಿ ಹುಸೇನ್ ಬಿ ಕೆಂಗಾನೂರ (Husain Bi Kenganur) ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಅವರನ್ನು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಸ್ಥಳೀಯರಿಂದ ರಕ್ಷಣಾ ಕಾರ್ಯ
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಮುಂದಾದರು. ಬಸ್‌ನ ಕಿಟಕಿಗಳನ್ನು ಒಡೆದು ಹಲವರನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಪೊಲೀಸರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ ಬಸ್‌ನ ಮುಂಭಾಗದ ಎಕ್ಸಲ್ ಮುರಿದಿರುವುದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಕೆಲ ಆರಂಭಿಕ ವರದಿಗಳಲ್ಲಿ ಟೈರ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್‌ನ್ನು ಕಂದಕದಿಂದ ಮೇಲಕ್ಕೆ ಎತ್ತುವ ಕಾರ್ಯ ನಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
