ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ತಮ್ಮ ಹೆಸರು ಸೇರದ ಹಿನ್ನೆಲೆಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ್ದರೂ ಸಚಿವ ಸ್ಥಾನದಿಂದ ಹೊರಗಿಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ರಾಜ್ಯ ಮತ್ತು ಪಕ್ಷಕ್ಕಾಗಿ ಇಷ್ಟು ವರ್ಷಗಳ ಕಾಲ ನಿಷ್ಠೆಯಿಂದ ಕೆಲಸ ಮಾಡಿದ ಬಳಿಕವೂ ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ನನಗೆ ತೀವ್ರ ನಿರಾಶೆ ಉಂಟುಮಾಡಿದೆ. ಅದಕ್ಕಿಂತಲೂ ಹೆಚ್ಚು ಬೇಸರ ತಂದಿರುವ ಸಂಗತಿ ಎಂದರೆ, ನನ್ನನ್ನು ಸಂಪುಟದಿಂದ ಕೈಬಿಡಲು ಯಾವುದೇ ಕಾರಣವನ್ನೂ ತಿಳಿಸಿಲ್ಲ” ಎಂದು ಅವರು ಹೇಳಿದ್ದಾರೆ.
ತಮ್ಮ ರಾಜಕೀಯ ಜೀವನದ ಕುರಿತು ಪ್ರಸ್ತಾಪಿಸಿರುವ ದಿನೇಶ್ ಗುಂಡೂರಾವ್, ಕರ್ನಾಟಕದ ಜನರ ಸೇವೆ ಮಾಡಲು ದೊರೆತ ಅವಕಾಶಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜನರ ಜೀವನಮಟ್ಟ ಸುಧಾರಣೆಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.
ಆರು ಬಾರಿ ಶಾಸಕನಾಗಿ ಆಯ್ಕೆಯಾಗಿರುವುದು ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಪ್ರೀತಿಯ ಪ್ರತೀಕವಾಗಿದೆ. “ಜನರ ವಿಶ್ವಾಸವೇ ನನ್ನ ರಾಜಕೀಯ ಜೀವನದ ದೊಡ್ಡ ಶಕ್ತಿ. ಕಾಂಗ್ರೆಸ್ ಪಕ್ಷದ ಮೇಲಿನ ನನ್ನ ಬದ್ಧತೆ ಹಾಗೂ ನನ್ನ ಕ್ಷೇತ್ರದ ಜನರ ಮೇಲಿನ ನಿಷ್ಠೆ ಎಂದಿಗೂ ಅಚಲವಾಗಿರುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಯುವ ಕಾಂಗ್ರೆಸ್‌ನಿಂದ ಆರಂಭಿಸಿ ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಹಾಗೂ ಎಐಸಿಸಿ ಮಟ್ಟದವರೆಗೆ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎಂದು ದಿನೇಶ್ ಗುಂಡೂರಾವ್ ನೆನಪಿಸಿಕೊಂಡಿದ್ದಾರೆ. ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ. ಮುಂದಿನ ದಿನಗಳಲ್ಲಿಯೂ ಜನಸೇವೆ ಮತ್ತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಇದೇ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.
ಇತ್ತ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಸಚಿವರ ಪಟ್ಟಿಯಲ್ಲಿ ಹೆಬ್ಬಾಳ್ಕರ್ ಅವರ ಹೆಸರು ಇಲ್ಲದಿರುವುದರಿಂದ ನಿರಾಸೆಗೊಂಡ ಅಭಿಮಾನಿಗಳು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿ ಟೋಲ್‌ಗೇಟ್ ಬಳಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟುಮಾಡಿದರು. ಪಕ್ಷದ ಹಿರಿಯ ನಾಯಕತ್ವವು ಈ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಬೆಂಬಲಿಗರು ಒತ್ತಾಯಿಸಿದರು. ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಮೂಡಿರುವ ಅಸಮಾಧಾನ ಇದೀಗ ಬಹಿರಂಗವಾಗಿ ವ್ಯಕ್ತವಾಗುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
