ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರೋಚಕತೆಯನ್ನು ಹೆಚ್ಚಿಸುತ್ತಿವೆ. ರಾಜ್ಯ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಿಢೀರನೆ ದೆಹಲಿಗೆ ಪ್ರಯಾಣ ಬೆಳಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಾಧ್ಯಮಗಳಿಗೆ “ದೆಹಲಿಗೆ ಹೋಗಲ್ಲ, ಹೋಗಲ್ಲ” ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಅವರು ದೆಹಲಿ ಫ್ಲೈಟ್ ಹತ್ತಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಹಾರಿದ ಡಿ.ಕೆ.ಶಿವಕುಮಾರ್ ಅವರು ಸಂಜೆಯ ಹೊತ್ತಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಳಿಕ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ದಿಢೀರ್ ಪಯಣದ ಹಿನ್ನೆಲೆಯಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರವಾಸಕ್ಕೂ ಮುನ್ನವೇ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರದ ಹಂಚಿಕೆ ಕುರಿತು ದೀರ್ಘಕಾಲದಿಂದ ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಒಪ್ಪಂದದ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಇತ್ತೀಚೆಗೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಯತೀಂದ್ರ ಅವರು ಸರ್ಕಾರದ ನೀತಿ ನಿರ್ಧಾರಗಳ ಬಗ್ಗೆ ಮಾತನಾಡಿದ್ದು, ಅಧಿಕಾರ ಹಂಚಿಕೆಯ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿತ್ತು.
ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನಲ್ಲಿ ಅವರ ಪಾತ್ರ ಅಪಾರವಾಗಿತ್ತು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರೊಂದಿಗೆ ಸ್ಪರ್ಧಿಸಿದ್ದ ಅವರು, ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಿದ್ದರು. ಆದರೆ, ಅಧಿಕಾರ ಹಂಚಿಕೆಯ ಒಪ್ಪಂದದ ಪ್ರಕಾರ, ಸರ್ಕಾರದ ಅರ್ಧಕಾಲದ ನಂತರ ನಾಯಕತ್ವ ಬದಲಾವಣೆಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.





