ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

Untitled design (55)

ಬೆಂಗಳೂರು (ಜುಲೈ 14): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 17ರಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್‌ನಿಂದ ಬಂದಿರುವ ಬುಲಾವಿನ ಮೇರೆಗೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಜುಲೈ 17ರಂದು ದೆಹಲಿಗೆ ತೆರಳಿ ಜುಲೈ 18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ಹಾಗೂ ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಸೇರಿದಂತೆ ಹಲವು ವಿಚಾರಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸಚಿವ ಸ್ಥಾನಾಕಾಂಕ್ಷಿಗಳ ಹೆಸರಿನ ಪಟ್ಟಿಯೊಂದಿಗೆ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಹೈಕಮಾಂಡ್‌ನೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮ ಪಟ್ಟಿಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ. ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ಅಥವಾ ವೇಳಾಪಟ್ಟಿಯನ್ನೂ ನಿಗದಿಪಡಿಸುವ ಸಾಧ್ಯತೆಗಳಿವೆ.

ಇದೇ ವೇಳೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ದೆಹಲಿಗೆ ಆಹ್ವಾನ ಬರುವ ಸಾಧ್ಯತೆ ಇದೆ ಎಂಬ ರಾಜಕೀಯ ವಲಯದ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಕುರಿತು ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.

ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಹೈಕಮಾಂಡ್ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Exit mobile version