ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆ ಇಂದು (ಮಾ.10) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರಿಗೆ ಭರ್ಜರಿ ಡಿನ್ನರ್ ಕೂಟವನ್ನು ಆಯೋಜಿಸಿದರು. ಈ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಿರುವುದು ಗಮನ ಸೆಳೆದಿದೆ. ಡಿನ್ನರ್‌ಗೆ ಸಿಎಂ ಆಗಮಿಸಿದ ಕ್ಷಣವೇ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಂತಾಗಿದೆ. ಸಿಎಂ ಹಾಗೂ ಡಿಸಿಎಂ ಒಟ್ಟಾಗಿ ಕಾಣಿಸಿಕೊಂಡಿರುವುದು ಪಕ್ಷದಲ್ಲಿ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವೆಂದು ಕಾಣುತ್ತಿದೆ.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಾಯಕತ್ವ ಬದಲಾವಣೆ ಕುರಿತು ಹಲವು ಊಹಾಪೋಹಗಳು ಕೇಳಿಬರುತ್ತಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದವು. ಇದೇ ಸಮಯದಲ್ಲಿ ಡಿಕೆ ಶಿವಕುಮಾರ್ ಆಯೋಜಿಸಿದ್ದ ಈ ಡಿನ್ನರ್ ಪಾರ್ಟಿ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿತ್ತು. ಡಿನ್ನರ್ ಮೂಲಕ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರೊಂದಿಗೆ ರಾಜಕೀಯ ಸಂದೇಶ ರವಾನಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು.
ಆದರೆ ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ ಸಿಎಂ ಸಿದ್ದರಾಮಯ್ಯ ಸ್ವತಃ ಡಿನ್ನರ್ ಕಾರ್ಯಕ್ರಮಕ್ಕೆ ಆಗಮಿಸಿದರು. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ–ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶವನ್ನು ನೀಡಲು ಪ್ರಯತ್ನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಡಿನ್ನರ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ನಾಯಕರು, ಸಚಿವರು ಹಾಗೂ ಶಾಸಕರು ಆಗಮಿಸಿದ್ದಾರೆ. ಸಚಿವರಾದ ಕೆ.ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಿ.ಪರಮೇಶ್ವರ, ಸಂತೋಷ್ ಲಾಡ್, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇದರ ಜೊತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಮಧು ಬಂಗಾರಪ್ಪ, ಶಾಸಕ ಲಕ್ಷ್ಮಣ್ ಸವದಿ ಸೇರಿದಂತೆ ಅನೇಕ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಈ ಡಿನ್ನರ್ ಕೂಟದಲ್ಲಿ ಹಾಜರಾಗಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಹಲವು ಹಿರಿಯ ನಾಯಕರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಈ ಡಿನ್ನರ್ ಕಾರ್ಯಕ್ರಮ ಕೇವಲ ರಾಜಕೀಯ ಸಭೆಯಷ್ಟೇ ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಒಳಗೊಂಡಿತ್ತು. ವಿವಿಧ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ನಾಯಕರಿಗೆ ವಿಶಿಷ್ಟ ಆತಿಥ್ಯ ನೀಡಲಾಗಿದೆ.
ರಾಜಕೀಯ ವಿಶ್ಲೇಷಕರ ಪ್ರಕಾರ, ಡಿಕೆ ಶಿವಕುಮಾರ್ ಆಯೋಜಿಸಿರುವ ಈ ಡಿನ್ನರ್ ಮೀಟಿಂಗ್ ಕಾಂಗ್ರೆಸ್ ಪಕ್ಷದ ಒಳಗಿನ ಒಗ್ಗಟ್ಟನ್ನು ಪ್ರದರ್ಶಿಸುವ ರಾಜಕೀಯ ತಂತ್ರವಾಗಿರಬಹುದು. ವಿಶೇಷವಾಗಿ ನಾಯಕತ್ವ ಬದಲಾವಣೆ ಕುರಿತ ಗೊಂದಲದ ನಡುವೆ ಪಕ್ಷದ ಶಾಸಕರು ಹಾಗೂ ಸಚಿವರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಒಗ್ಗಟ್ಟಿನ ಸಂದೇಶ ನೀಡಲು ಈ ಕಾರ್ಯಕ್ರಮ ನೆರವಾಗಬಹುದು ಎಂದು ಹೇಳಲಾಗುತ್ತಿದೆ.
