ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಶಾಸಕರಿಗೆ ಮತದಾನ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಇಂದು ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಅಣಕು ಮತದಾನ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ನೇತೃತ್ವದಲ್ಲಿ ಶಾಸಕರಿಗೆ ಮತದಾನದ ವಿಧಾನ ಕುರಿತು ವಿವರವಾಗಿ ತಿಳಿಸಲಾಯಿತು. ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಮತದಾನ ಪ್ರಕ್ರಿಯೆಯನ್ನು ಪ್ರದರ್ಶಿಸಿ, ಶಾಸಕರು ಯಾವುದೇ ಗೊಂದಲವಿಲ್ಲದೆ ಮತ ಚಲಾಯಿಸುವಂತೆ ಮಾರ್ಗದರ್ಶನ ನೀಡಿದರು.
ಈಗಾಗಲೇ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಪರಿಷತ್ ಚುನಾವಣೆಯ ಸಿದ್ಧತೆಗಳನ್ನು ಅಂತಿಮಗೊಳಿಸಿದ್ದಾರೆ. ಚುನಾವಣೆಯ ದಿನವಾದ ಗುರುವಾರ ಬೆಳಗ್ಗೆ ಎಲ್ಲಾ ಶಾಸಕರು ರೆಸಾರ್ಟ್‌ನಿಂದಲೇ ಒಟ್ಟಾಗಿ ಬಸ್ ಮೂಲಕ ವಿಧಾನಸೌಧಕ್ಕೆ ತೆರಳಿ ಮತದಾನದಲ್ಲಿ ಭಾಗವಹಿಸಲಿದ್ದಾರೆ.
ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಒಗ್ಗಟ್ಟಿನ ಸಂದೇಶ ನೀಡಿರುವುದಾಗಿ ಹೇಳಿದರು. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ಎಲ್ಲರೂ ಒಂದೇ ಮನಸ್ಸಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು 28 ಮತಗಳು ಸಾಕು. ಆದ್ದರಿಂದ ನಮಗೆ ಹೆಚ್ಚುವರಿ ಮತಗಳ ಅವಶ್ಯಕತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜೆಡಿಎಸ್ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ಗೆ ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಸಂಖ್ಯಾಬಲ ನಮ್ಮಲ್ಲೇ ಇದೆ. ಆದ್ದರಿಂದ ಯಾರನ್ನೂ ಸಂಪರ್ಕಿಸುವ ಅಗತ್ಯವಿಲ್ಲ ಎಂದು ಜಮೀರ್ ಅಹ್ಮದ್ ತಿಳಿಸಿದರು.
ಮಂಗಳವಾರ(ಜೂ. 15) ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಸಚಿವರಾದ ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು. ಅಲ್ಲದೆ, ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್ತ ಹಾಗೂ ಗೋಪಿನಾಥ್ ಪಳನಿಸ್ವಾಮಿ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳುವ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಪಕ್ಷದೊಳಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಎಲ್ಲ ನಾಯಕರು ಹಾಗೂ ಶಾಸಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸಂದೇಶವನ್ನು ಸಭೆಯಲ್ಲಿ ಪುನರುಚ್ಚರಿಸಲಾಯಿತು. ಚುನಾವಣೆಯ ದಿನ ಎಲ್ಲ ಶಾಸಕರು ಒಟ್ಟಾಗಿ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜಯಕ್ಕಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಪಕ್ಷದ ಏಕತೆ ಮತ್ತು ಸಂಘಟಿತ ಶಕ್ತಿ ಈ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರದರ್ಶಿತವಾಗಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದರು.





