ಬೆಂಗಳೂರು: ರಾಜ್ಯದ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಕಡೆಗಣಿಸುವ ಯಾವುದೇ ಖಾಸಗಿ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.
ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ.
— DK Shivakumar (@DKShivakumar) October 25, 2026
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಏನಿದು ವಿವಾದ?
ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ ಎಂಬ ಆರೋಪದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಯುವತಿಯೊಬ್ಬರು ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಕನ್ನಡವನ್ನು ಮಾತೃಭಾಷೆಯಾಗಿ ಉಲ್ಲೇಖಿಸಿದರೆ ಉದ್ಯೋಗ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್ ಸಂದರ್ಶನಗಳು ಕಡಿಮೆಯಾಗಿವೆ ಮತ್ತು ಹೊರರಾಜ್ಯಗಳ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪಗಳನ್ನೂ ಯುವತಿ ಮಾಡಿದ್ದಾರೆ. ಕಡಿಮೆ ಸಂಬಳಕ್ಕೆ ಹೊರರಾಜ್ಯಗಳಿಂದ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದರಿಂದ ಸ್ಥಳೀಯ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ ಎಂಬುದು ಅವರ ಅಳಲು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಪರ ಸಂಘಟನೆಗಳು ಕೂಡ ಕನ್ನಡಿಗರ ಉದ್ಯೋಗಾವಕಾಶಗಳ ಕುರಿತು ಕಳವಳ ವ್ಯಕ್ತಪಡಿಸಿವೆ. ಕನ್ನಡ ನಾಡಿನಲ್ಲಿಯೇ ಕನ್ನಡಿಗರು ಉದ್ಯೋಗಕ್ಕಾಗಿ ಸಂಕಷ್ಟ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಉದ್ದೇಶಪೂರ್ವಕವಾಗಿ ಅನ್ಯಾಯವಾಗುತ್ತಿರುವುದು ಸಾಬೀತಾದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.





