ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಜೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇಲ್ಲಿನ ಪ್ರಮುಖ ಕೇಬಲ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಇಡೀ ಫ್ಯಾಕ್ಟರಿಯನ್ನು ಆವರಿಸಿಕೊಂಡಿದೆ. ಸುಮಾರು ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದ್ದು, ಆಕಾಶದೆತ್ತರಕ್ಕೆ ಚಿಮ್ಮುತ್ತಿರುವ ದಟ್ಟ ಹೊಗೆಯ ಕಾರ್ಮೋಡ ಕಿಲೋಮೀಟರ್ ದೂರದವರೆಗೂ ಕಾಣಿಸುತ್ತಿದೆ.
ಘಟನೆ ನಡೆದ ವೇಳೆ ಕಾರ್ಖಾನೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಲ್ಲರೂ ಹೊರಓಡಿ ಬಂದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಆದರೆ, ಕೇಬಲ್ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ರಬ್ಬರ್ ಮತ್ತು ಕೆಮಿಕಲ್ ಸೇರಿದಂತೆ ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿದ್ದ ಕಾರಣ ಜ್ವಾಲೆ ನಿಯಂತ್ರಣಕ್ಕೆ ಬರುತ್ತಿಲ್ಲ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು 100ಕ್ಕೂ ಹೆಚ್ಚು ಸಿಬ್ಬಂದಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳೀಯ ರೈತರ ನೆರವು
ಬೆಂಕಿ ನಂದಿಸಲು ನೀರಿನ ಅಭಾವ ಎದುರಾದ ಹಿನ್ನೆಲೆಯಲ್ಲಿ, ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳೀಯ ರೈತರ ತೋಟಗಳ ಪಂಪ್‌ಸೆಟ್‌ಗಳಿಂದ ನೀರನ್ನು ತರಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಕಿ ಪಕ್ಕದ ಇತರ ಕೈಗಾರಿಕೆಗಳಿಗೆ ಹರಡದಂತೆ ತಡೆಯಲು ‘ಫೈರ್ ಬ್ರೇಕ್’ ತಂತ್ರಜ್ಞಾನ ಬಳಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಖಾನೆಯ ಸುತ್ತಮುತ್ತಲಿನ ಸುಮಾರು 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ದೊಡ್ಡಬಳ್ಳಾಪುರ ತಹಶಿಲ್ದಾರ್ ಮಲ್ಲಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದಾರೆ. ಎಸ್‌ಡಿಆರ್‌ಎಫ್ (SDRF) ತಂಡವೂ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದೊಂದಿಗೆ ಸಮನ್ವಯ ಸಾಧಿಸುತ್ತಿದೆ. ಬೆಂಕಿಯ ತೀವ್ರತೆ ಹೆಚ್ಚಿರುವುದರಿಂದ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರಿಯುವ ಸಾಧ್ಯತೆಯಿದೆ. ಸಾರ್ವಜನಿಕರು ಈ ಭಾಗಕ್ಕೆ ಬರದಂತೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರಾಥಮಿಕ ಅಂದಾಜಿನಿಂದ ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ಈ ಅನಾಹುತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಬೆಂಕಿ ಪೂರ್ಣವಾಗಿ ನಂದಿದ ನಂತರವಷ್ಟೇ ನಿಖರ ಕಾರಣ ತಿಳಿಯಲಿದೆ.





