ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

Untitled design 2026 05 22T204202.608

ಕೊಡಗು: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಕರ್ನಾಟಕ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ಏಕಾಏಕಿ ಭಾರೀ ಕಾದಾಟ ಆರಂಭವಾಗಿತ್ತು. ಈ ವೇಳೆ ಶಿಬಿರಕ್ಕೆ ಪ್ರವಾಸಕ್ಕೆ ಬಂದಿದ್ದ ತಮಿಳುನಾಡು ಮೂಲದ ಜುನೇಷೆ ಎಸ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಘಟನೆಯಲ್ಲಿ “ಮಾರ್ತಾಂಡ” ಎಂಬ ಸಾಕಾನೆ ಕೂಡ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವೈಫಲ್ಯವೇ ದುರಂತಕ್ಕೆ ಪ್ರಮುಖ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರ ಬೆನ್ನಲ್ಲೇ ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಮತ್ತು ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು ಸಮರ್ಪಕವಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆನೆಗಳ ವರ್ತನೆ, ಭದ್ರತಾ ವಲಯ ಹಾಗೂ ಪ್ರವಾಸಿಗರ ನಿಯಂತ್ರಣ ವ್ಯವಸ್ಥೆಯಲ್ಲಿ ಹಲವು ಕೊರತೆಗಳಿದ್ದವು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಪ್ರವಾಸಿಗರನ್ನು ಅಪಾಯದ ವಲಯದಿಂದ ದೂರವಿಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಉಪ ಲೋಕಾಯುಕ್ತ ಅಭಿಪ್ರಾಯಪಟ್ಟಿದ್ದಾರೆ.

ಘಟನೆಯ ನಂತರ ದುಬಾರೆ ಶಿಬಿರದ ನಿರ್ವಹಣೆಯ ಕುರಿತಾಗಿ ಹಲವು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಸಾಕಾನೆಗಳ ನಡುವೆ ಆಗಾಗ್ಗೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಿಲ್ಲವೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸುವುದು, ಸುರಕ್ಷಿತ ವೀಕ್ಷಣಾ ಪ್ರದೇಶ ನಿರ್ಮಿಸುವುದು ಹಾಗೂ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸುವಲ್ಲಿ ನಿರ್ಲಕ್ಷ್ಯ ನಡೆದಿದೆ ಎನ್ನಲಾಗಿದೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಅವರು ಈ ಘಟನೆ ಜೀವಿಸುವ ಹಕ್ಕಿಗೆ ಸಂಬಂಧಿಸಿದ ಸಂವಿಧಾನದ 21ನೇ ವಿಧಿಯ ಉಲ್ಲಂಘನೆ ಎಂದು ಉಲ್ಲೇಖಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವುದು ಸರ್ಕಾರ ಮತ್ತು ಅಧಿಕಾರಿಗಳ ಮೂಲಭೂತ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ಅವರು, ಜನರ ಜೀವಕ್ಕೆ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ್ದಾರೆ.

ಇದೀಗ ಸಂಬಂಧಿತ ಅರಣ್ಯ ಅಧಿಕಾರಿಗಳಿಗೆ ಜೂನ್ 24ರೊಳಗೆ ವೈಯಕ್ತಿಕವಾಗಿ ತಮ್ಮ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ಘಟನೆಯ ನಿಜಸ್ವರೂಪ ಹಾಗೂ ಅಧಿಕಾರಿಗಳ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ನಡೆಯುವ ಸಾಧ್ಯತೆಯಿದೆ. ಜೊತೆಗೆ ದುಬಾರೆ ಶಿಬಿರದ ಸುರಕ್ಷತಾ ವ್ಯವಸ್ಥೆಯನ್ನೂ ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಲಾಗಿದೆ.

Exit mobile version