ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನಡೆದಿರುವ ಬಹುಚರ್ಚಿತ ಚಿನ್ನ ಕಳವು ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ದೇವಾಲಯದಲ್ಲಿ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (E.D) ಅಧಿಕಾರಿಗಳು ಬೆಂಗಳೂರು ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಗುರುವಾರ ಬೆಳ್ಳಂ ಬೆಳಗ್ಗೆಯೇ ಇಡಿ ಅಧಿಕಾರಿಗಳು ಬೆಂಗಳೂರು, ಬಳ್ಳಾರಿ, ತಿರುವನಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಟ್ರಸ್ಟ್‌ನ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಕರ್ನಾಟಕದ ಬಳ್ಳಾರಿಯಲ್ಲಿ ಹಲವು ಚಿನ್ನಾಭರಣ ಅಂಗಡಿಗಳ ಮೇಲೂ ಇಡಿ ದಾಳಿ ನಡೆಸಿದ್ದು, ಪ್ರಮುಖವಾಗಿ ಜ್ಯುವೆಲ್ಲರಿ ಅಂಗಡಿಗಳನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸಲಾಗಿದೆ. ಚಿನ್ನದ ವಹಿವಾಟು, ಹಣಕಾಸು ವ್ಯವಹಾರಗಳು ಹಾಗೂ ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ದ್ವಾರಪಾಲಕರ ವಿಗ್ರಹಗಳಿಗೆ ಚಿನ್ನದ ಲೇಪನ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಚಿನ್ನವನ್ನು ದುರುಪಯೋಗಪಡಿಸಿಕೊಂಡು ಕಳವು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದ ತನಿಖೆಯನ್ನು ಕೇರಳ ಹೈಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಕೈಗೆತ್ತಿಕೊಂಡಿದ್ದು, ತನಿಖೆಯಲ್ಲಿ ಅನೇಕ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ.
SIT ತನಿಖೆಯ ಪ್ರಕಾರ, ದೇವಾಲಯದಲ್ಲಿ ನಡೆದ ಚಿನ್ನದ ಲೇಪನ ಕಾರ್ಯದ ವೇಳೆ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿರುವುದು ದೃಢಪಟ್ಟಿದೆ. ಈ ಕಳವು ಪ್ರಕರಣದಲ್ಲಿ ದೇವಾಲಯದ ಕೆಲ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಚಿನ್ನದ ವ್ಯಾಪಾರಿಗಳು ಸೇರಿ ಸಂಚು ರೂಪಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಮುಖ ಆರೋಪಿಗಳಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಹಾಗೂ ಪಂಕಜ್ ಭಂಡಾರಿ ಹೆಸರುಗಳು ಮುಂಚೂಣಿಯಲ್ಲಿವೆ. ಇವರನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ. ಕಳವು ಮಾಡಿದ ಚಿನ್ನವನ್ನು ಯಾವ ಮಾರ್ಗದಲ್ಲಿ ಮಾರಾಟ ಮಾಡಲಾಗಿದೆ, ಹಣದ ಲೆಕ್ಕಾಚಾರ ಹೇಗಿದೆ ಎಂಬುದರ ಕುರಿತು ಇಡಿ ತನಿಖೆ ನಡೆಸುತ್ತಿದೆ.





