ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

Your paragraph text (31)

ಬೆಂಗಳೂರು: ಕೆಂಗೇರಿ ಸಮೀಪದ ಆರ್.ಆರ್. ವೈದ್ಯಕೀಯ ಕಾಲೇಜು ಹಿಂಭಾಗದ ಅಂಚೆಪಾಳ್ಯದಲ್ಲಿ ಸೋಮವಾರ ಬೆಳಗಿನ ಜಾವ ಕಾಡಾನೆ ದಾಳಿ ಶಂಕಿತ ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಂಚೆಪಾಳ್ಯದ ನಿವಾಸಿ ನಾಗರಾಜ್ ಎಂದು ಗುರುತಿಸಲಾಗಿದೆ. ಸುಮಾರು 60 ವರ್ಷದ ನಾಗರಾಜ್ ಅವರು ಬೆಳಗಿನ ಜಾವ ವಾಕಿಂಗ್‌ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ನಾಗರಾಜ್ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಯ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆಯ ಬಳಿಕ ದೃಢಪಡಿಸಬೇಕಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಕಾಂಪೌಂಡ್‌ಗಳು ಹಾನಿಗೊಳಗಾಗಿರುವುದು ಕಂಡುಬಂದಿದೆ. ಇದೇ ವೇಳೆ ಸಮೀಪದ ವಸತಿ ಪ್ರದೇಶದ ಸಿಸಿಟಿವಿ ಕ್ಯಾಮೆರಾದಲ್ಲಿ ಬೆಳಗ್ಗೆ 5.11ರ ಸುಮಾರಿಗೆ ಆನೆಯೊಂದು ರಸ್ತೆಯಲ್ಲಿ ವೇಗವಾಗಿ ಓಡಾಡಿರುವ ದೃಶ್ಯ ಸೆರೆಯಾಗಿದೆ. ಮತ್ತೊಬ್ಬ ವ್ಯಕ್ತಿ ಇದೇ ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವೇಳೆ ಕೆಲವೇ ಕ್ಷಣಗಳ ಅಂತರದಲ್ಲಿ ಆನೆಯಿಂದ ಬಚಾವಾಗಿರುವ ಮಾಹಿತಿಯೂ ಲಭ್ಯವಾಗಿದೆ.

ಈ ಪ್ರದೇಶ ಕಗ್ಗಲಿಪುರ ಅರಣ್ಯ ವಲಯದ ವ್ಯಾಪ್ತಿಗೆ ಬರುತ್ತದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಆನೆ ಬನ್ನೇರುಘಟ್ಟ ವನ್ಯಜೀವಿ ಪ್ರದೇಶದಿಂದ ಈ ಭಾಗಕ್ಕೆ ಬಂದಿರುವ ಸಾಧ್ಯತೆ ಇದೆ. ಆನೆಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಸೆರೆಹಿಡಿಯಲು ಅರಣ್ಯ ಇಲಾಖೆಯ ತಂಡ ಶೋಧ ಕಾರ್ಯಾಚರಣೆ ಆರಂಭಿಸಿದೆ.

ನಾಗರಾಜ್ ಅವರು ಪತ್ನಿ ಹಾಗೂ ನಾಲ್ವರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರು ದಿನಗೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಘಟನೆ ಬಳಿಕ ಅಂಚೆಪಾಳ್ಯ ಹಾಗೂ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರದ ಬಗ್ಗೆ ಮಾಹಿತಿ ಇದ್ದರೂ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾರೆಡ್ಡಿ, ಹೊಸದಾಗಿ ರಸ್ತೆ ನಿರ್ಮಾಣವಾದ ಬಳಿಕ ಈ ಭಾಗದಲ್ಲಿ ಆನೆಗಳ ಓಡಾಟ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಬನ್ನೇರುಘಟ್ಟದಿಂದ ಬಿಎಂ ಕಾವಲ್ ಭಾಗಕ್ಕೆ ಆನೆಗಳು ಸಂಚರಿಸುತ್ತಿದ್ದು, ಕೆಲವೊಮ್ಮೆ ಕಾಡಿನಿಂದ ಸುಮಾರು ಐದು ಕಿಲೋಮೀಟರ್ ಒಳಭಾಗಕ್ಕೂ ಬರುತ್ತಿವೆ ಎಂದು ತಿಳಿಸಿದ್ದಾರೆ.

ನಾಗರಾಜ್ ವಾಕಿಂಗ್ ಮಾಡುತ್ತಿದ್ದ ವೇಳೆ ಆನೆ ದಾಳಿ ನಡೆಸಿರುವ ಸಾಧ್ಯತೆ ಇದೆ. ಆನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ತಂಡ ಕಾರ್ಯನಿರ್ವಹಿಸುತ್ತಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಮೃತ ನಾಗರಾಜ್ ಅವರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಅವರು ಘೋಷಿಸಿದ್ದಾರೆ.

Exit mobile version