ಹಾಸನದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

Untitled Design 2026 11 15T133142.819

ಹಾಸನ: ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಮೃತ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಮೃತದೇಹವನ್ನು ಶವಪೆಟ್ಟಿಗೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಜಯಮ್ಮ ಎಂಬ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆದರೆ, ಈ ಘಟನೆ ಹಲವು ವರ್ಷಗಳಿಂದ ಕಾಡಾನೆಗಳ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ಗ್ರಾಮಸ್ಥರ ಆಕ್ರೋಶಕ್ಕೂ ಕಾರಣವಾಗಿದೆ. ಪದೇಪದೆ ಕಾಡಾನೆಗಳು ಗ್ರಾಮಗಳತ್ತ ನುಗ್ಗಿ ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಮೃತದೇಹವನ್ನು ಶವಪೆಟ್ಟಿಗೆಯಲ್ಲಿಟ್ಟು ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿರುವ ಗ್ರಾಮಸ್ಥರು, ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕಾರರು, ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವರು ಸ್ಥಳಕ್ಕೆ ಬರಲೇಬೇಕು!

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಂಸದ ಶ್ರೇಯಸ್ ಪಟೇಲ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ಶಾಸಕ ಎಚ್.ಕೆ. ಸುರೇಶ್ ಅವರೂ ಸ್ಥಳದಲ್ಲಿರುವವರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂಬ ನಿಲುವು ತಳೆದಿದ್ದಾರೆ.

ಅರಣ್ಯ ಸಚಿವರೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಸ್ಪಷ್ಟ ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು  ಪಟ್ಟು ಹಿಡಿದಿದ್ದಾರೆ. ಕೇವಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಭರವಸೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರವೇ ಗಂಭೀರವಾಗಿ ಮಧ್ಯಪ್ರವೇಶಿಸಿ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಸ್ಥಳದಲ್ಲೇ ಮೊಕ್ಕಾಂ ಹೂಡಿದ ಅರಣ್ಯ ಇಲಾಖೆ ಅಧಿಕಾರಿಗಳು

ಪ್ರತಿಭಟನೆಯ ಹಿನ್ನೆಲೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೂ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಿಸಿಎಫ್ ಏಡುಕುಂಡಲ ಹಾಗೂ ಡಿಎಫ್‌ಒ ಹರೀಶ್ ಅವರು ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ಮುಂದುವರಿಸಿದ್ದಾರೆ. ಗ್ರಾಮಸ್ಥರ ಆಕ್ರೋಶವನ್ನು ಶಮನಗೊಳಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯ ಸಾವಿಗೆ ಕಾರಣವಾದ ಕಾಡಾನೆಗಳ ಹಾವಳಿಗೆ ತಕ್ಷಣ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಪಟ್ಟು

ಕಾಡಾನೆಗಳ ಸಂಚಾರವನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳು ಪರಿಣಾಮಕಾರಿಯಾಗಿಲ್ಲ ಎಂಬುದು ಗ್ರಾಮಸ್ಥರ ಅಸಮಾಧಾನ. ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಜನರು ಪ್ರತಿದಿನ ಜೀವಭಯದಲ್ಲೇ ಬದುಕುವಂತಾಗಿದೆ. ಹೊಲ, ತೋಟಗಳಿಗೆ ತೆರಳುವುದಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಜೀವ ಬಲಿಯಾಗಿರುವುದು ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.

ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬಾರದಂತೆ ಸೂಕ್ತ ತಡೆಗಟ್ಟುವ ವ್ಯವಸ್ಥೆ ಮಾಡಬೇಕು. ಅಪಾಯಕಾರಿ ಆನೆಗಳ ಚಲನವಲನದ ಮೇಲೆ ನಿರಂತರ ನಿಗಾ ಇಡಬೇಕು. ಅಗತ್ಯವಿರುವ ಕಡೆಗಳಲ್ಲಿ ರೈಲು ಕಂಬಿ ಬೇಲಿ, ಸೌರ ಬೇಲಿ ಸೇರಿದಂತೆ ಪರಿಣಾಮಕಾರಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಬೇಕು. ಕಾಡಾನೆ ದಾಳಿಯಿಂದ ಮೃತಪಟ್ಟ ಜಯಮ್ಮ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆಗಳೂ ಗ್ರಾಮಸ್ಥರಿಂದ ಕೇಳಿಬರುತ್ತಿವೆ.

 

Exit mobile version